ಬೆಂಗಳೂರು, ಸೆ.19- ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಶಮನಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಸೇರಲು ಆಕಾಂಕ್ಷಿಗಳ ಲಾಭಿ ಬಿರುಸು ಪಡೆದುಕೊಂಡಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತಮ್ಮ ಪ್ರಭಾವ ಬಳಸಿ ಪ್ರಯತ್ನ ಮುಂದುವರಿಸುತ್ತಿದ್ದಾರೆ. ಜಾರಕಿಹೊಳಿ ಸಹೋದರರು ಬಂಡಾಯದ ಬಾವುಟ ಹಾರಿಸಿದ್ದರಿಂದ ಸಂಪುಟ ವಿಸ್ತರಣೆ ಮುಂದೂಡಲಾಗಿತ್ತು. ಇದೀಗ ಬಂಡಾಯವನ್ನು ತಾತ್ಕಾಲಿಕವಾಗಿ ಶಮನಗೊಳಿಸಲಾಗಿದ್ದು, ಇದು ಸಂಪುಟ ವಿಸ್ತರಣೆಯ ವೇಳೆ ಮತ್ತೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಸಂಪುಟ ವಿಸ್ತರಿಸುವ ಕಸರತ್ತು ನಡೆಸುತ್ತಿದೆ.
ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸಲು ದೆಹಲಿಯಲ್ಲಿ ಇಂದು ಎಐಸಿಸಿ ನಾಯಕರ ಸಭೆ ಕರೆಯಲಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಯಾರಿಗೆಲ್ಲಾ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಸಿ, ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಅವರ ನಿರ್ಧಾರ ಜಾರಕಿಹೊಳಿ ಸಹೋದರರಿಗೆ ಪೂರಕವಾಗಿರಲಿದೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ಮುಂದಾಗಿರುವುದರಿಂದ ಜಾರಕಿಹೊಳಿ ಸಹೋದರರ ಬೇಡಿಕೆ ಈಡೇರುವ ಸಾಧ್ಯತೆ ಹೆಚ್ಚಿದೆ.
ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ನಿವಾಸ ಇಂದು ಇಡೀ ದಿನ ಬಿರುಸಿನ ರಾಜಕೀಯ ಚಟುವಟಿಕೆಗೆ ಸಾಕ್ಷಿಯಾಯಿತು. ಬೆಳಗ್ಗೆಯೆ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್ ಅವರೊಂದಿಗೆ ವೇಣುಗೋಪಾಲ್ ಮಹತ್ವದ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಕಾಣಿಸಿಕೊಂಡ ಭಿನ್ನಮತ, ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ. ಈ ಸಭೆಯಲ್ಲಿ ಈ ಎಲ್ಲಾ ವಿಷಯಗಳಲ್ಲೂ ಒಮ್ಮತದ ತೀರ್ಮಾನ ಕೈಗೊಂಡ ಬಳಿಕ ಸಂಜೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಈ ನಾಲ್ವರು ನಾಯಕರು ಸಭೆ ನಡೆಸಲಿದ್ದಾರೆ. ಅಂತಿಮವಾಗಿ ರಾಹುಲ್ ಗಾಂಧಿ ನಿರ್ಧಾರ ಕೈಗೊಳ್ಳಲಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಬಂಡಾಯವೆದ್ದಿದ್ದ ಸತೀಶ್ ಜಾರಕಿಹೊಳಿ ಕೂಡ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಅವರೊಂದಿಗೆ ವೇಣುಗೋಪಾಲ್ ಸುದೀರ್ಘವಾಗಿ ಚರ್ಚಿಸಿದ್ದಾರೆ.
ವಿಧಾನ ಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಮೂರು ಸ್ಥಾನಗಳಿಗೆ ಇದೇ 28ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳ ಆಯ್ಕೆ ಇಂದು ಅಂತಿಮಗೊಳ್ಳುವ ಸಾಧ್ಯತೆ ಇದೆ.
ಸಂಪುಟ ವಿಸ್ತರಣೆ ಮಾಡಿದರೆ ಉಂಟಾಗಬಹುದಾದ ಅಸಮಾಧಾನ, ಅದರ ಸಾಧಕ-ಬಾಧಕದ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಬಂಡಾಯ ಉಂಟಾದರೆ ಅದನ್ನು ಹೇಗೆ ನಿಭಾಯಿಸಬೇಕು ಎಂಬ ಸೂತ್ರವನ್ನು ಸಭೆಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಮತ್ತು 1 ಸ್ಥಾನ ಜೆಡಿಎಸ್ ಪಕ್ಷಕ್ಕೆ ಮೀಸಲಾಗಿದೆ. ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನಡೆಯಬೇಕಿದೆ. ಸಂಪುಟ ವಿಸ್ತರಣೆ ಅಕ್ಟೋಬರ್ ಮೊದಲ ವಾರ ನಡೆಯಲಿದೆ ಎಂದು ಈಗಾಗಲೇ ಘೋಷಿಸಲಾಗಿದ್ದು, ಹಲವು ಹಿರಿಯ ಮತ್ತು ಕಿರಿಯ ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೆÇೀಟಿ ಆರಂಭಿಸಿದ್ದಾರೆ.
ಶಾಸಕರಾದ ರಾಮಲಿಂಗಾ ರೆಡ್ಡಿ, ಎಚ್.ಕೆ.ಪಾಟೀಲ್, ಬಿ.ಕೆ.ಸಂಗಮೇಶ್, ಎಂಟಿಬಿ ನಾಗರಾಜ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ನಾಗೇಂದ್ರ, ಆನಂದ್ ಸಿಂಗ್, ತುಕಾರಾಂ, ಪಿ.ಟಿ.ಪರಮೇಶ್ವರ್ ನಾಯಕ್, ಲಕ್ಷ್ಮೀ ಹೆಬ್ಬಾಳ್ಕರ್ ಸಚಿವಾಕಾಂಕ್ಷಿಯಾಗಿದ್ದಾರೆ. ಆದರೆ ಇರುವ ಆರು ಸ್ಥಾನಗಳಿಗೆ ಆಯ್ಕೆ ಮಾಡಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.
ಜಾರಕಿಹೊಳಿ ಸಹೋದರರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳ್ಳಾರಿಗೆ ಒಂದು ಸಚಿವ ಸ್ಥಾನ ನೀಡಬೇಕಿದೆ. ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದು, ಅವರು ತಮ್ಮ ಪ್ರಭಾವ ಬಳಸಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಈಗಾಗಲೆ ಪ್ರಬಲ ಆಕಾಂಕ್ಷಿಯಾಗಿರುವ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ದೆಹಲಿಗೆ ತೆರಳಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ.
ಅದೇ ರೀತಿ ಶಾಸಕ ನಾಗೇಂದ್ರ, ಎಂಟಿಬಿ ನಾಗರಾಜ್ ಸೇರಿದಂತೆ ಇತರ ಕೆಲವು ಕಾಂಗ್ರೆಸ್ ಶಾಸಕರು ಕೂಡ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಸಂಪುಟದಲ್ಲಿ ಸ್ಥಾನ ದೊರೆಯದಿದ್ದರೆ ತಮ್ಮ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಈಗಾಗಲೇ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ಜಯನಗರದ ಚುನಾವಣೆಯಲ್ಲಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಬಾಗಲಕೋಟೆ-ವಿಜಯಪುರ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಸಹೋದರರನ್ನು ಗೆಲ್ಲಿಸಿಕೊಂಡು ಬಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ಒಟ್ಟಿನಲ್ಲಿ ಕಾಂಗ್ರೆಸ್ಗೆ ಸಂಪುಟ ವಿಸ್ತರಣೆ ದೊಡ್ಡ ಕಂಟಕವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಾಗಿದೆ. ಜಾತಿ, ಪ್ರಾದೇಶಿಕ, ಜಿಲ್ಲಾವಾರು, ಹಿರಿತನ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ಅಳೆದು ತೂಗಿ ಇರುವ 6 ಸ್ಥಾನಗಳನ್ನು ತುಂಬಬೇಕಿದೆ. ಇದರಲ್ಲಿ ಕಾಂಗ್ರೆಸ್ ತೆಗೆದುಕೊಳ್ಳುವ ನಿರ್ಧಾರ ಸರ್ಕಾರದ ಅಸ್ತಿತ್ವದ ಮೇಲೆ ಪರಿಣಾಮ ಬೀರುವುದರಲ್ಲಿ ಯಾವುದೇ ಸಂಶಯವಿಲ್ಲ. ಇದೇ ವೇಳೆ ಜೆಡಿಎಸ್ ಒಂದು ಸ್ಥಾನವನ್ನು ಖಾಲಿ ಇಟ್ಟು ಭಿನ್ನಮತ ಏಳದಂತೆ ನೋಡಿಕೊಳ್ಳಲು ನಿರ್ಧರಿಸಿದೆ.
ಲಿಂಗಾಯಿತ ಶಾಸಕರ ಅಸಮಾಧಾನ
ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಶಮನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ದೆಹಲಿಯಲ್ಲಿ ಇಂದು ಕರೆದ ರಾಜ್ಯ ನಾಯಕರ ಸಭೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ಆಮಂತ್ರಣ ನೀಡದೆ ಇರುವುದಕ್ಕೆ ಪಕ್ಷದ ಲಿಂಗಾಯಿತ ಶಾಸಕರು , ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ಪ್ರಮುಖ ಸಮುದಾಯದ ಪ್ರತಿನಿಧಿಯಾದ ಅವರನ್ನು ಸಭೆಗೆ ಆಹ್ವಾನಿಸದೆ ಇರುವುದು ಖಂಡನೀಯ. ನೆಪಕ್ಕೆ ಮಾತ್ರ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬುದನ್ನು ಇದು ಸೂಚಿಸುತ್ತದೆ ಎಂದು ವರಿಷ್ಠರ ನಡೆಗೆ ಶಾಸಕರು ಗರಂ ಆಗಿದ್ದಾರೆ. ಇದು ಸಮುದಾಯಕ್ಕೆ ಮಾಡಿದ ದೊಡ್ಡ ಅವಮಾನ. ಇದನ್ನು ಸರಿಪಡಿಸುವಂತೆ ಪಕ್ಷದ ವರಿಷ್ಠರಲ್ಲಿ ಶಾಸಕರು ಮನವಿ ಮಾಡಿದ್ದಾರೆ.