ಬೆಂಗಳೂರು, ಸೆ.20- ಸಮ್ಮಿಶ್ರ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲಾಗಿ, ಆಪರೇಷನ್ ಕಮಲಕ್ಕೆ ಕೈ ಹಾಕಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾದರು.
ಬೆಂಗಳೂರು ಕೇಂದ್ರ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ದನ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಿ ಬಿಜೆಪಿಯವರ ಜನವಿರೋಧಿ ಧೋರಣೆಯನ್ನು ಖಂಡಿಸಿದರು.
ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ಮಾಡಿಸಿ ಅಪಪ್ರಚಾರ ಮಾಡಲಾಗುತ್ತಿದೆ. ಕಾಂಗ್ರೆಸ್-ಜೆಡಿಎಸ್ನ ಹಲವು ಶಾಸಕರಿಗೆ ವಿವಿಧ ಆಮಿಷಗಳನ್ನು ಒಡ್ಡಿ ಬಿಜೆಪಿ ಪಕ್ಷಕ್ಕೆ ಸೆಳೆಯುವ ಕೆಲಸ ಮಾಡಿ ಸರ್ಕಾರವನ್ನು ಅತಂತ್ರಗೊಳಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ಈ ಬಗ್ಗೆ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಕಳೆದ ನೂರು ದಿನಗಳಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಯಾವುದೇ ಕುತಂತ್ರ ಯಶಸ್ವಿಯಾಗಿಲ್ಲ. ಹತಾಶರಾಗಿರುವ ಅವರು ಶಾಸಕರನ್ನು ಸೆಳೆಯುವ ನಾಟಕವಾಡುತ್ತಿದ್ದಾರೆ. ಇದರಲ್ಲಿ ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕವಿಕಾ ಮಾಜಿ ಅಧ್ಯಕ್ಷ ಎಸ್.ಮನೋಹರ್, ರಾಮಕೃಷ್ಣ, ಆನಂದ್, ಮುರಳಿ, ಶೇಖರ್ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.