ಬೆಂಗಳೂರು,ಸೆ.21 ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ನಡೆಯುತ್ತಿರುವ ಸಂಘರ್ಷ ಇದೀಗ ರಾಜಭವನದ ಕದತಟ್ಟಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆಯನ್ನು ಮುಂದಿಟ್ಟುಕೊಂಡಿರುವ ಬಿಜೆಪಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ದೂರು ನೀಡಿದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಎಸ್.ಸುರೇಶ್ಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದೆ.
ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿಗಳೇ ಜನರನ್ನು ಪ್ರಚೋದನೆಗೊಳಿಸುತ್ತಿರುವುದರಿಂದ ಈಗಾಗಲೇ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಮುಂದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆ. ಅಧಿಕೃತ ಪ್ರತಿಪಕ್ಷದ ನಾಯಕರಿಗೆ ರಕ್ಷಣೆ ಇಲ್ಲ ಅಂದರೆ ಜನಸಾಮಾನ್ಯರ ಗತಿ ಏನು ಎಂದು ದೂರಿನಲ್ಲಿ ಪ್ರಶ್ನಿಸಲಾಗಿದೆ.
ನಾವು ಪ್ರತಿಪಕ್ಷಗಳ ಸದಸ್ಯರನ್ನು ಸೆಳೆದು ಸರ್ಕಾರ ರಚಿಸುವಂತಹ ಹೀನ ಕೃತ್ಯಕ್ಕೆ ಕೈ ಹಾಕಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲವನ್ನು ಬಿಜೆಪಿ ಕಡೆ ತಿರುಗಿಸಲು ಮುಖ್ಯಮಂತ್ರಿಗಳು ಇಂತಹ ಕ್ಷುಲ್ಲಕ ಹೇಳಿಕೆ ನೀಡುವ ಮೂಲಕ ಜನರನ್ನು ಪ್ರಚೋದನೆಗೊಳಿಸುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಸರ್ಕಾರದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದಿಂದ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದನ್ನು ಮರೆಮಾಚಲು ಸಿಎಂ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಮೇಲೆ ಟೀಕೆ ಮಾಡುತ್ತಿದ್ದಾರೆ. ಮೊದಲು ಮುಖ್ಯಮಂತ್ರಿ ಅವರನ್ನು ಕರೆದು ಮಾತನಾಡಬೇಕೆಂದು ಮನವಿ ಮಾಡಲಾಗಿದೆ.
ಮುಖ್ಯಮಂತ್ರಿಗಳ ಹೇಳಿಕೆಯಿಂದ ಕೆಲವು ಕಡೆ ಪ್ರತಿಭಟನೆಗಳು ನಡೆದಿವೆ. ತಮ್ಮ ಹೇಳಿಕೆಯನ್ನು ಮರೆಮಾಚಲು ಈಗ ಬೇರೊಂದು ರೀತಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ದಂಗೆ ಏಳು ಎಂದರೆ ಪ್ರಚೋದನೆ ಮಾಡಿದಂತೆ. ಇದಕ್ಕೆ ಅವಕಾಶ ಕೊಡದಂತೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.
ಸ್ವಾಮಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಬಿಜೆಪಿ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎಂದರು.
ಪ್ರತಿಭಟನೆಯಲ್ಲಿ ನಗರ ಘಟಕ ಅಧ್ಯಕ್ಷ ಸದಾಶಿವ, ಮಾಜಿ ಶಾಸಕ ಮುನಿರಾಜು, ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.