ಬೆಂಗಳೂರು, ಸೆ.23-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಪ್ರಚಾರವನ್ನು ತೀವ್ರಗೊಳಿಸುವುದು ಸೇರಿದಂತೆ ಮಹತ್ವದ ಚರ್ಚೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಪಾಲ್ಗೊಳ್ಳಲು ನಾಳೆ ದೆಹಲಿಗೆ ತೆರಳಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಸೀಟು ಹಂಚಿಕೆ ಕುರಿತು ಚರ್ಚಿಸಲಿದ್ದಾರೆ. ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು. ಜೆಡಿಎಸ್‍ಗೆ ಎಷ್ಟು ಸ್ಥಾನ ಬಿಟ್ಟುಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.
ಇದೇ ಸಂದರ್ಭದಲ್ಲಿ ರಾಹುಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿರುವ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚಿಸಲಿದ್ದಾರೆ.