ಬೆಂಗಳೂರು, ಸೆ.25-ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇನ್ನು ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಿದೆ. ರಾಮನಗರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉಂಟಾಗಿದ್ದ ವಿಂಡ್‍ಬ್ರೇಕ್ ದುರ್ಬಲಗೊಂಡ ಬೆನ್ನಲ್ಲೇ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಕರಾವಳಿ ಭಾಗದಲ್ಲಿ ಇನ್ನೂ ನಾಲ್ಕು ದಿನಗಳ ಮಳೆ ಮುಂದುವರೆಯಲಿದೆ. ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ತಿಳಿಸಿದರು.