ಬೆಂಗಳೂರು,ಅ.3- ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಅಂಗವಾಗಿ ಬೆಂಗಳೂರಿನಿಂದ ಮೈಸೂರಿಗೆ 150 ರೂ. ಪ್ರಯಾಣ ದರದಲ್ಲಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದಸರಾ ಉತ್ಸವಕ್ಕೆ ಅಧಿಕೃತ ಆಹ್ವಾನ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೈಸೂರು ದಸರಾ ಉತ್ಸವಕ್ಕೆ ಆಗಮಿಸುವವರಿಗಾಗಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಏರ್ ಇಂಡಿಯಾದಿಂದ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಅಂದರೆ ಆಕಾಶ ಅಂಬಾರಿ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಹೇಳಿದರು.
ಅಸಮಾಧಾನವಿಲ್ಲ:
ಸಾ.ರಾ.ಮಹೇಶ್ ಹಾಗೂ ತಾವು ಒಟ್ಟಿಗೆ ಇದ್ದೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಆದರೂ ಆಧಾರರಹಿತ ಸುದ್ದಿ ಬಿತ್ತರವಾಗುತ್ತಿದೆ ಎಂದು ಜಿ.ಟಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಎಲ್ಲರೂ ಒಟ್ಟಾಗಿದ್ದೇವೆ. ನಾನು ಚಿಕ್ಕವನಿದ್ದಾಗಿನಿಂದಲೂ ನನಗೆ ಹಿತಶತ್ರುಗಳು ಇದ್ದಾರೆ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ.