ಬೆಂಗಳೂರು, ಅ.7- ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆ ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನಿರ್ದೇಶನ ನೀಡಿದ್ದಾರೆ.
ನಿನ್ನೆಯಷ್ಟೆ ಭಾರತದ ಚುನಾವಣಾ ಆಯೋಗ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಯನ್ನು ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಿತ್ರ ಪಕ್ಷವಾದ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕೆಂಬ ಸಲಹೆಯನ್ನು ಮುಖ್ಯಮಂತ್ರಿಗೆ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಉಪಚುನಾವಣೆಯ ಮೈತ್ರಿ ಕುರಿತು ನಿರ್ಧಾರ ಮಾಡುವಂತೆ ದೇವೇಗೌಡರು ಕುಮಾರಸ್ವಾಮಿಗೆ ಸಲಹೆ ಮಾಡಿದ್ದಾರೆಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.
ಮೂರೂ ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಳ್ಳಲಿದೆ. ಬಳ್ಳಾರಿ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟು ಕೊಡಲು ಸಿದ್ಧವಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಯಾವ ಪಕ್ಷ ಸ್ಪರ್ಧೆ ಮಾಡಬೇಕೆಂಬುದು ನಿರ್ಧಾರವಾಗಬೇಕಿದೆ. ಒಂದು ವೇಳೆ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಕ್ಷೇತ್ರ ಬಿಟ್ಟುಕೊಟ್ಟರೆ ಮಾಜಿ ಶಾಸಕ ಮಧುಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಉದ್ದೇಶಿಸಲಾಗಿದೆ.
ಶಾಸಕರಾಗಿ ಸಚಿವ ಸಿ.ಎಸ್.ಪುಟ್ಟರಾಜು ಚುನಾಯಿತರಾದ ನಂತರ ಮಂಡ್ಯ ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಈಗ ಉಪಚುನಾವಣೆ ಘೋಷಣೆಯಾಗಿದ್ದು, ಜೆಡಿಎಸ್‍ನ ಅಭ್ಯರ್ಥಿ ಇನ್ನು ನಿರ್ಧಾರವಾಗಿಲ್ಲ.
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಲು ಜೆಡಿಎಸ್ ಬಹುತೇಕ ಸಿದ್ಧವಾಗಿದೆ. ಜಮಖಂಡಿ ಕ್ಷೇತ್ರವನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲು ಜೆಡಿಎಸ್ ಉದ್ದೇಶಿಸಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರ ನಡುವೆ ಚರ್ಚೆ ನಡೆದು ನಿರ್ಧಾರವಾಗಬೇಕಿದೆ.
ವಿಜಯಪುರ ವಿಧಾನಪರಿಷತ್‍ನ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿತ್ತು. ಅದೇ ರೀತಿ ವಿಧಾನಸಭೆ ಉಪಚುನಾವಣೆಯಲ್ಲೂ ಮೈತ್ರಿ ಮುಂದುವರೆಸಬೇಕೆಂಬ ಅಪೇಕ್ಷೆ ಜೆಡಿಎಸ್‍ನದ್ದಾಗಿದೆ.
ಪಿತೃಪಕ್ಷ ಮುಗಿದ ನಂತರ ಜೆಡಿಎಸ್ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳ ಅಭ್ಯರ್ಥಿಗಳನ್ನು ಪ್ರಕಟಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.