ಬೆಂಗಳೂರು, ಅ.17-ಪೌರಾಡಳಿತ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೆ ಯಾವುದೇ ರೀತಿಯ ನೋಟಿಸ್ ನೀಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಚೇರಿ ಸ್ಪಷ್ಟಪಡಿಸಿದೆ.
ಸಚಿವ ರಮೇಶ್ ಜಾರಕಿ ಹೊಳಿ ಅವರು ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿರುವುದಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲು ರಾಜ್ಯಸರ್ಕಾರ ಮುಂದಾಗಿದೆ ಎಂಬ ರೀತಿಯಲ್ಲಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದಕ್ಕೆ ಸತ್ಯಕ್ಕೆ ದೂರವಾಗಿದೆ.
ಜಾರಕಿ ಹೊಳಿ ಅವರು ಸಚಿವ ಸಂಪುಟ ಸಭೆಗೆ ಹಾಜರಾಗದಿರುವ ಬಗ್ಗೆ ಸಾರ್ವಜನಿಕರೊಬ್ಬರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಆ ಅರ್ಜಿಯನ್ನು ಆಧರಿಸಿ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆ ವಿವರ: ರಮೇಶ್ ಜಾರಕಿ ಹೊಳಿ ಅವರು ಸುಮಾರು 6 ಸಚಿವ ಸಂಪುಟ ಸಭೆಗಳಿಗೆ ಗೈರು ಹಾಜರಾಗಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗುಂಡಪ್ಪ ಗಡಾದ ಅವರು ಮುಖ್ಯಮಂತ್ರಿ ಹಾಗೂ ಮುಖ್ಯಕಾರ್ಯದರ್ಶಿಯವರಿಗೆ ಪತ್ರ ಬರೆದು ರಮೇಶ್ ಜಾರಕಿ ಹೊಳಿ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿದರು. ಈ ಬಗ್ಗೆ ಮುಖ್ಯಕಾರ್ಯದರ್ಶಿಯವರ ಕಚೇರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಪರಿಶೀಲಿಸುವಂತೆ ಸೂಚನೆ ನೀಡಿದೆ.