ಉಪಚುನಾವಣೆಯಲ್ಲಿ ದೋಸ್ತಿ ಮುಂದುವರೆದರೂ ಕಾರ್ಯಕರ್ತರ ನಡುವೆ ಇದೆ ಇನ್ನೂ ಗೊಂದಲ

ಬೆಂಗಳೂರು, ಅ.22-ಸಮ್ಮಿಶ್ರ ಸರ್ಕಾರದಲ್ಲಿರುವ ಜೆಡಿಎಸ್-ಕಾಂಗ್ರೆಸ್ ರಾಜ್ಯದ ಉಪಚುನಾವಣೆಯಲ್ಲಿ ದೋಸ್ತಿ ನಿಭಾಯಿಸುತ್ತಿದ್ದರೂ ಕೆಳಹಂತದಲ್ಲಿ ಮಾತ್ರ ಎಷ್ಟೇ ಪ್ರಯತ್ನ ಪಟ್ಟರೂ ಕಾರ್ಯಕರ್ತರ ನಡುವೆ ಗೊಂದಲ ಇನ್ನು ಮುಂದುವರೆದಿದೆ.
ಮಂಡ್ಯ, ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೊತೆಗಿನ ಹೋರಾಟಕ್ಕಿಂತಲೂ ಕಾಂಗ್ರೆಸ್-ಜೆಡಿಎಸ್ ನಡುವಿನ ಸಂಘರ್ಷಗಳೇ ಹೆಚ್ಚು ಸದ್ದು ಮಾಡುತ್ತಿವೆ.

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಮ್ಯಾ ಅಭಿಮಾನಿ ಸಂಘದ ಪ್ರಮುಖರಾದ ಕಾಂಗ್ರೆಸ್ ಕಾರ್ಯಕರ್ತ ಗುಣಶೇಖರ್ ಅವರು ತಾವು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‍ನ ಮಾಜಿ ಶಾಸಕರು ಮತ್ತು ಮುಖಂಡರು ದೋಸ್ತಿ ಅಭ್ಯರ್ಥಿಯಾಗಿರುವ ಎಲ್.ಆರ್.ಶಿವರಾಮೇಗೌಡ ಅವರ ಪರವಾಗಿ ಈವರೆಗೂ ಬಹಿರಂಗವಾಗಿ ಪ್ರಚಾರಕ್ಕೆ ಇಳಿದಿಲ್ಲ. ಹಲವು ಸುತ್ತಿನ ಸಂಧಾನ ಸಭೆಗಳು ನಡೆಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ನಾಳೆ ಎರಡೂ ಪಕ್ಷಗಳ ಕಾರ್ಯಕರ್ತರ ಮತ್ತು ಪ್ರಮುಖರ ಸಭೆ ಕರೆಯಲಾಗಿದೆ.

ರಾಮನಗರದಲ್ಲಿ ಇದೇ ರೀತಿಯ ಗೊಂದಲ ಇದ್ದಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಒಂದೇ ವೇದಿಕೆಯಲ್ಲಿ ಕುಳಿತು ಸಭೆ ನಡೆಸುವ ಮೂಲಕ ಸ್ಪಷ್ಟ ಸಂದೇಶ ರವಾನೆ ಮಾಡಿದ್ದರು. ಆದರೆ ಮಂಡ್ಯದಲ್ಲಿ ಈ ರೀತಿಯ ಹೊಂದಾಣಿಕೆ ಕಾಣುತ್ತಿಲ್ಲ. ಜೆಡಿಎಸ್‍ನ ಭದ್ರಕೋಟೆಯಾಗಿರುವ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಪೈಪೆÇೀಟಿ ನೀಡುತ್ತಿರುವುದು ದೋಸ್ತಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇನ್ನು ಬಳ್ಳಾರಿ ಜಿಲ್ಲೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು ಬಹಿರಂಗ ಪ್ರಚಾರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಸಾಕಷ್ಟು ಅಸಮಾಧಾನಗಳಿದ್ದವು. ಹೀಗಾಗಿ ಕೆಲವು ನಾಯಕರು ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಅದರಲ್ಲೂ ಸಚಿವ ಡಿ.ಕೆ.ಶಿವಕುಮಾರ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿಯಾಗಿರುವುದು ಕಾಂಗ್ರೆಸ್‍ನ ಇತರ ನಾಯಕರಿಗೆ ಬಿಸಿ ತುಪ್ಪವಾಗಿದೆ. ಬೆಳಗಾವಿ ಜಿಲ್ಲೆಯ ಸಚಿವರಾದ ರಮೇಶ್ ಜಾರಕಿ ಹೊಳಿ ಈ ಬಗ್ಗೆ ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಪೈಕಿ ಕೂಡ್ಲಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿರುವ ಸಚಿವ ರಮೇಶ್ ಜಾರಕಿ ಹೊಳಿ, ಒಟ್ಟಾರೆ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಲೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಜಿಲ್ಲೆಯಲ್ಲಿರುವ ಅಸಮಾಧಾನಗಳನ್ನು ನಿವಾರಿಸಲು ಇಂದಿನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದು, ಎಲ್ಲಾ ನಾಯಕರ ಜೊತೆ ಸಮಾಲೋಚನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಜಮಖಂಡಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಮುಖಂಡ ಸುಶೀಲ್‍ಕುಮಾರ್ ಬೆಳಗಲಿ ಅವರು ಸಿದ್ದು ನ್ಯಾಮೇಗೌಡ ಅವರ ಪುತ್ರ ಆನಂದ್ ನ್ಯಾಮೇಗೌಡ ಅವರಿಗೆ ಟಿಕೆಟ್ ನೀಡುತ್ತಿದ್ದಂತೆ ಅಸಮಾಧಾನಗೊಂಡಿದ್ದಾರೆ. ಅದಕ್ಕಾಗಿಯೇ ಅವರು ಸ್ವಕ್ಷೇತ್ರದಲ್ಲಿ ಪ್ರಚಾರ ನಡೆಸದೆ ಬಳ್ಳಾರಿ ಕ್ಷೇತ್ರಕ್ಕೆ ಹೋಗಿದ್ದು, ಅಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.
ಇನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಅಂತಹ ಯಾವುದೇ ಗೊಂದಲಗಳಿಲ್ಲದೆ ಉಭಯ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ