ನಾಳೆ ಜೆಡಿಎಸ್ ಸಂಸದೀಯ ಮಂಡಳಿ ಸಭೆ
ಬೆಂಗಳೂರು, ಮಾ.6- ನಾಳೆ ಜೆಡಿಎಸ್ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನು ಹಾಕಬೇಕೆ, ಬೇಡವೆ ಎಂಬುದರ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಬೇರೆ ಪಕ್ಷದ ಬೆಂಬಲ ಇಲ್ಲದೆ ರಾಜ್ಯಸಭೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಸಾಧ್ಯವಿಲ್ಲ. ಈಗಾಗಲೇ ಜೆಡಿಎಸ್ ಜತೆ ಮೈತ್ರಿ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಹಾಗಾಗಿ ರಾಜ್ಯಸಭೆಗೆ ಅಭ್ಯರ್ಥಿಯನ್ನು ಹಾಕಬೇಕೆ, ಬೇಡವೆ. ಹಾಕಿದರೂ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ.
ಕಾಂಗ್ರೆಸ್ ಪಕ್ಷ ಶಾಸಕ ಖೇಣಿಯನ್ನು ಸೇರ್ಪಡೆ ಮಾಡಿಕೊಂಡಿದೆ. ಹಾಗಾಗಿ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಯನ್ನು ಮುಂದುವರಿಸಬೇಕೆ, ಬೇಡವೆ ಎಂಬುದರ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.
ಮುಂಬರುವ ವಿಧಾನಸಭಾ ಚುನಾವಣೆ ಗೆಲುವಿಗೆ ಏನೆಲ್ಲ ತಂತ್ರಗಳನ್ನು ರೂಪಿಸಬೇಕು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಗುವುದು ಎಂದು ಹೇಳಲಾಗಿದೆ.