ಬೆಂಗಳೂರು,ಅ.24-ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿದ್ಯುತ್ ವಿತರಣಾ ಕಂಪನಿಗಳಾದ ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ಎಲ್ಲ ವಿದ್ಯುತ್ ಕಂಪನಿಗಳಿಗೂ ಸೂಚನೆ ನೀಡಿದ್ದು, ಜನರ ಹಿತದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ.
ಲೋಡ್ ಶೆಡ್ಡಿಂಗ್ ಮಾಡುವುದರಿಂದ ಜನರಿಗೆ ತೀವ್ರ ತೊಂದರೆಯಾಗಲಿದೆ.ಕೇಂದ್ರ ಸರ್ಕಾರದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.ಕೇಂದ್ರದ ವಿದ್ಯುತ್ ಸ್ಥಾವರದಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾದರೂ ಕೂಡ ಲೋಡ್ ಶೆಡ್ಡಿಂಗ್ ಮಾಡದಂತೆ ತಾಕೀತು ಮಾಡಿದ್ದಾರೆ.
ಈ ಸಂಬಂಧ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಲ್ಲಿದ್ದಲು ಕೊರತೆಯಿಂದಾಗಿ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಇಳಿಮುಖವಾಗಿದೆ. ಹೀಗಾಗಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ವಿದ್ಯುತ್ ಕಂಪನಿಗಳು ಮುಂದಾಗಿದ್ದವು.ಜನರ ಹಿತದೃಷ್ಟಿಯಿಂದ ಲೋಡ್ ಶೆಡ್ಡಿಂಗ್ ಮಾಡದಂತೆ ಮುಖ್ಯಮಂತ್ರಿಯವರು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಒಪ್ಪಂದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆಯಾಗದಿರುವುದರಿಂದ ರಾಯಚೂರು ಥರ್ಮಲ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.
ಕೇಂದ್ರದ ವಿದ್ಯುತ್ ಗ್ರಿಡ್ನಿಂದ ಸಹ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗುತ್ತಿಲ್ಲ.ಹಾಗಾಗಿಯೂ ಸೋಲಾರ್ ಮತ್ತು ಹೈಡ್ರೋ ಪವರ್ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕೆಂದು ಸಿಎಂ ಆದೇಶಿಸಿದ್ದಾರೆ.
ಕೆಲವು ಮಾಧ್ಯಮಗಳಲ್ಲಿ ಲೋಡ್ ಶೆಡ್ಡಿಂಗ್ಗೆ ಆದೇಶ ಹೊರಡಿಸಲಾಗಿದೆ ಎಂಬ ಸುದ್ದಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇಂದು ಕೆಪಿಟಿಸಿಎಲ್ಗೆ ಲೋಡ್ ಶೆಡ್ಡಿಂಗ್ ಮಾಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.