ಬೆಂಗಳೂರು, ಅ.26-ಯಾವುದೇ ರಾಜಕೀಯ ಉದ್ದೇಶದಿಂದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಸ್ಪಷ್ಟಪಡಿಸಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ, ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಆದಿಚುಂಚಗಿರಿ ಶ್ರೀಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಬೇಡ. ಅವರ ಆಶೀರ್ವಾದ ಪಡೆಯಲಷ್ಟೇ ಬಂದಿದ್ದಾಗಿ ಅವರು ಸ್ಪಷ್ಟಪಡಿಸಿದರು.
ತಮ್ಮ ಆರೋಗ್ಯ ವಿಚಾರಿಸಲು ರಾತ್ರಿ ಶ್ರೀಗಳು ತಮ್ಮ ಮನೆಗೆ ಬರುವುದಾಗಿ ಹೇಳಿದ್ದರು. ನೀವು ಹಿರಿಯರಿದ್ದೀರಿ. ನಾನೇ ಮಠಕ್ಕೆ ಬರುತ್ತೇನೆ ಎಂದು ಹೇಳಿದ್ದೆ. ಇಂದು ಬೆಳಗ್ಗೆ ಶ್ರೀಗಳು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಅಗತ್ಯವಿಲ್ಲ ಎಂದರು.