ಬೆಂಗಳೂರು, ಅ.26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಎರಡು ದಿನಗಳ ಕಾಲ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರ ಪರವಾಗಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಜೆಡಿಎಸ್ ಪಕ್ಷ ಆಯೋಜಿಸಿರುವ ಬಹಿರಂಗ ಸಭೆಗಳಲ್ಲಿ ಶಿವರಾಮೇಗೌಡ ಅವರ ಪರವಾಗಿ ಮತ ಯಾಚನೆ ಮಾಡಲಿದ್ದಾರೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಶಿವರಾಮೇಗೌಡ ಅವರನ್ನು ಕಣಕ್ಕಿಳಿಸಿವೆ.
ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದವನ್ನು ಮುಖ್ಯಮಂತ್ರಿ ಪಡೆದರು.
ಇಂದು ಮಳವಳ್ಳಿಯಲ್ಲಿ ಶಿವರಾಮೇಗೌಡ ಅವರ ಪರವಾಗಿ ಪ್ರಚಾರ ನಡೆಸಿದ ಮುಖ್ಯಮಂತ್ರಿ ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಮತ ನೀಡುವಂತೆ ಮನವಿ ಮಾಡಿದರು.
ಇಂದು ಮಧ್ಯಾಹ್ನ ಮದ್ದೂರು ಹಾಗೂ ಸಂಜೆ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿರುವ ಚುನಾವಣಾ ಪ್ರಚಾರದ ಸಭೆಗಳಲ್ಲಿ ಪಾಲ್ಗೊಂಡು ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡುವ ಮುಖ್ಯಮಂತ್ರಿ, ನಾಳೆ ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಕೆ.ಆರ್.ಪೇಟೆಗಳಲ್ಲಿ ಚುನಾವಣಾ ಪ್ರಚಾರದ ಸಭೆಗಳಲ್ಲಿ ಭಾಗವಹಿಸಿ ಮತ ಯಾಚನೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಸೇರಿದಂತೆ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.