ರಫೆಲ್ ಯುದ್ಧ ವಿಮಾನ ಖರೀದಿ ವಿವಾದ: ಒಪ್ಪಂದದ ಕುರಿತು ಸುಪ್ರೀಂ ಗೆ ವರದಿ ಸಲ್ಲಿಸಿದ ಕೇಂದ್ರ

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದೆ.

ತೀವ್ರ ಚರ್ಚೆಗೆ ಗ್ರಾಸವಾಗಿರುವ ಭಾರತ ಮತ್ತು ಫ್ರಾನ್ಸ್ ನಡುವಣ ನಡೆದಿದ್ದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಪ್ರಧಾನಿ ಮೋದಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, 59 ಸಾವಿರ ಕೋಟಿ ರೂ ಮೌಲ್ಯದ 36 ಯುದ್ಧ ವಿಮಾನಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳುವ ಒಪ್ಪಂದದಲ್ಲಿ ಎನ್ ಡಿಎ ಸರ್ಕಾರ ಭಾರೀ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದೆ.

ಒಪ್ಪಂದ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ಎಂ.ಎಲ್.ಶರ್ಮಾ ಎಂಬುವವರು ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅ.10 ರಂದು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿ ಎಸ್.ಕೆ. ಕೌಲ್ ಮತ್ತು ಕೆ.ಎಂ ಜೋಸೆಫ್ ಅವರನ್ನೊಳಗೊಂಡ ಪೀಠ ಅ.29ರೊಳಗೆ ರಫೆಲ್ ಒಪ್ಪಂದ ನಿರ್ಧಾರ ಕ್ಕೆ ಕೈಗೊಂಡ ಪ್ರಕ್ರಿಯೆ ಕುರಿತು ಮೊಹರು ಮಾಡಿದ ಲಕೋಟೆಯಲ್ಲಿ ವಿವರ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿತ್ತು.

ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ