ಬೆಂಗಳೂರು, ಅ.28-ಜಾತ್ಯತೀತ ತತ್ವದ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸ್ಥಳೀಯ ಮುಖಂಡರು ಭಿನ್ನಾಪ್ರಾಯಗಳನ್ನು ಮರೆತು ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಅವರ ಪರವಾಗಿ ನಾವೆಲ್ಲಾ ಒಟ್ಟಾಗಿ ಕೆಲಸ ಮಾಡೋಣ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಿಳಿಸಿದರು.
ಅನಿತಾ ಕುಮಾರಸ್ವಾಮಿ ಅವರನ್ನು ಭಾರೀ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಪ್ರಯತ್ನಿಸಬೇಕು. ಕೋಮುವಾದಿ ಪಕ್ಷವನ್ನು ದೂರ ಇಡುವ ಉದ್ದೇಶದಿಂದ ಉಭಯ ಪಕ್ಷಗಳ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಪ್ರತ್ಯೇಕವಾಗಿ ಹೋರಾಟ ಮಾಡಿದ್ದವು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಾಕಷ್ಟು ಜನಪರ ಕೆಲಸ ಮಾಡುತ್ತಿದ್ದಾರೆ. ರಾಮನಗರದಲ್ಲೂ ಉತ್ತಮ ಕೆಲಸ ಮಾಡುವ ಭರವಸೆಯನ್ನು ಅನಿತಾ ಕುಮಾರಸ್ವಾಮಿ ನೀಡಿದ್ದಾರೆ ಎಂದು ಹೇಳಿದರು.
ಅನಿತಾ ಕುಮಾರಸ್ವಾಮಿ ಮಾತನಾಡಿ, ಈ ಕ್ಷೇತ್ರದ ಮತದಾರರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ. ಈ ಉಪ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಬೇಕು. ಮನೆ ಮಗಳಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ಆಶೀರ್ವಾದ ಮಾಡಿ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಕುಮಾರಸ್ವಾಮಿ ಅವರು ರೈತ ಪರವಾದ ಆಡಳಿತ ನೀಡುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.