ಬೆಂಗಳೂರು, ನ.3- ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ಒಲಿದು ಬರಲಿದೆಯೇ..? ಹೀಗೊಂದು ಸುದ್ದಿ ಜೆಡಿಎಸ್ ವಲಯದಲ್ಲಿ ಕೇಳಿ ಬರುತ್ತಿದೆ.
ವಿಧಾನ ಪರಿಷತ್ ಹಿರಿಯ ಸದಸ್ಯ, ಪ್ರಸ್ತುತ ಹಂಗಾಮಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್ ವರಿಷ್ಠರು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಹೊರಟ್ಟಿ ಅವರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್‍ಗೆ ಬೆಂಬಲಿಸಿರುವ ಬಿಎಸ್‍ಪಿಯಿಂದ ಶಾಸಕರಾಗಿದ್ದ ಎನ್. ಮಹೇಶ್ ಅವರಿಗೆ ಸಚಿವ ಸ್ಥಾನ ನೀಡಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ನೀಡಲಾಗಿತ್ತು.
ಆದರೆ, ಇತ್ತೀಚೆಗೆ ಉಂಟಾದ ರಾಜಕೀಯ ಬೆಳವಣಿಗೆಯಲ್ಲಿ ಬಿಎಸ್‍ಪಿ ಶಾಸಕ ಎನ್.ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಅಂದಿನಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಿಎಂ ಬಳಿಯೇ ಇದೆ. ಈಗಾಗಲೇ ಹಣಕಾಸು, ಇಂಧನ, ವಾರ್ತಾ ಸೇರಿದಂತೆ ಮತ್ತಿತರ ಖಾತೆಗಳನ್ನು ಇಟ್ಟುಕೊಂಡಿರುವ ಸಿಎಂ ಅವರಿಗೆ ಕೆಲಸದ ಒತ್ತಡವೂ ಹೆಚ್ಚಿದೆ.
ಜತೆಗೆ ಪರೀಕ್ಷೆಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಈ ಖಾತೆ ಬಗ್ಗೆ ಕುಮಾರಸ್ವಾಮಿ ಅವರಿತೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.
ಹಾಗಾಗಿ, ಈಗಾಗಲೇ ಖಾತೆ ನಿಭಾಯಿಸಿ ಅನುಭವ ಇರುವ ಬಸವರಾಜ ಹೊರಟ್ಟಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ನೀಡಲು ಕುಮಾರಸ್ವಾಮಿ ಅವರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಉಪ ಚುನಾವಣೆ ಫಲಿತಾಂಶದ ನಂತರ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ.