ಬೆಂಗಳೂರು, ನ.7- ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಪ್ರಾಚಾರ್ಯರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ 10ರಂದು ಎನ್ಎಂಕೆಆರ್ವಿ ಪದವಿ ಪೂರ್ವ ಕಾಲೇಜಿನ ಮಂಗಳ ಮಂಟಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಶಾಸಕ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2017-18ನೆ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ನಮ್ಮ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕಿ ಸೌಮ್ಯರೆಡ್ಡಿ, ಎಸ್.ಎಲ್.ಭೋಜೇಗೌಡ, ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ನ ಜಂಟಿ ಕಾರ್ಯದರ್ಶಿ ಡಿ.ಪಿ.ನಾಗರಾಜ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುನಾಥ್, ಖಜಾಂಚಿ ಎಂ.ನಾಗರಾಜ್, ಪರೀಕ್ಷಾ ಸಂಚಾಲಕ ಶಂಕರ್ ಸೇರಿದಂತೆ ಮತ್ತಿತರರಿದ್ದರು.