ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು: ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅವರು ಸಂಸದರಾಗಿ, ಕೇಂದ್ರ ಸಚಿವರಾಗಿ ದೇಶಕ್ಕೆ ನೀಡಿದ ಕೊಡುಗೆ ಅನನ್ಯವಾದದ್ದು. ತಮ್ಮ ಜನಪರ ಕಾಳಜಿ, ಕಾರ್ಯಚಟುವಟಿಕೆಗಳಿಂದಾಗಿ ಬೆಂಗಳೂರಿಗರ ಕಣ್ಮಣಿ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದು, ಭಗವಂತನು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ ಅಂತ ಸಂತಾಪ ಸೂಚಿಸಿದ್ದಾರೆ.

ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ ಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಬೆಳಗ್ಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅನಂತ ಕುಮಾರ್ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ