ಬೆಂಗಳೂರು, ನ.18-ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ, ಸಿಎಂ ಸ್ಥಾನ ಬದಲಾವಣೆಯೂ ಇಲ್ಲ. ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗುವ ಅರ್ಹತೆ ಸಾಕಷ್ಟು ಜನರಿಗಿದೆ. ಅದರಲ್ಲಿ ಪರಮೇಶ್ವರ್ ಕೂಡ ಒಬ್ಬರು. ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಪರಮೇಶ್ವರ್ ನೀಡಿರುವ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿಎಂ ಹುದ್ದೆ ಖಾಲಿಯಿಲ್ಲ. ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗುವ ತನ್ನ ಆಸೆಯನ್ನು ಹೇಳಿಕೊಂಡಿದ್ದಾರೆ. ಅದಕ್ಕಾಗಿ ಅರ್ಹ ಆಕಾಂಕ್ಷಿಗಳು ಕಾಂಗ್ರೆಸ್‍ನಲ್ಲಿ ಸಾಕಷ್ಟು ಜನರಿದ್ದಾರೆ. ಹಾಗಾಗಿ ನೋಡೋಣ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ಐದು ರಾಜ್ಯಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಭೇಟಿಯ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.
ಸಂಪುಟದಲ್ಲಿ ಖಾಲಿ ಇರುವ ಕಾಂಗ್ರೆಸ್ ಪಾಲಿನ ಆರು ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ರಾಹುಲ್‍ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
ಇಂದಿರಾ ಕ್ಯಾಂಟೀನ್ ಬಗ್ಗೆ ಕಾಂಗ್ರೆಸ್‍ಗೆ ಒಳ್ಳೆಯ ಹೆಸರು ಬಂದು ಬಿಡುತ್ತದೆ ಎಂಬ ಭಯದಿಂದ ಬಿಜೆಪಿಯವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಂದಿರಾ ಕ್ಯಾಂಟೀನ್‍ನಿಂದ ಬಡವರ ಹಸಿವು ನೀಗುತ್ತಿದೆ. ಇದರ ಶ್ರೇಯಸ್ಸು ನಮ್ಮ ಪಕ್ಷಕ್ಕೆ ಸಿಗುತ್ತದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿ ಸಂಚು ಮಾಡುತ್ತಿದೆ ಎಂದು ಹೇಳಿದರು.
ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರನ್ನು ಹಿಟ್ಲರ್ ಎಂದು ಕರೆಯುವ ಆರ್‍ಎಸ್‍ಎಸ್ ಫ್ಯಾಸಿಸ್ಟ್ ಮನೋಭಾವ ಹೊಂದಿದ್ದಾರೆ. ಅವರೇ ಹಿಟ್ಲರ್‍ಗಳಂತೆ ಆಡಳಿತ ನಡೆಸುತ್ತಿದ್ದಾರೆ. ಹಿಟ್ಲರ್ ವಂಶಸ್ಥರು ಅವರು ಸಿದ್ದರಾಮಯ್ಯ ಆರೋಪಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ಕರೆದಿದ್ದಾರೆ. ಸ್ಥಳ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಸಿಬಿಐ ರಾಜ್ಯ ಪ್ರವೇಶ ಸಂಬಂಧ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೈಗೊಂಡ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ ಅವರು, ರಾಜ್ಯ ಸರ್ಕಾರ ಈ ಹಿಂದೆಯೇ ಈ ನಿರ್ಧಾರ ಕೈಗೊಂಡಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಅನುಮತಿ ಪಡೆದೇ ಸಿಬಿಐ ಸಂಸ್ಥೆ ವಿಚಾರಣೆ ನಡೆಸಬೇಕು ಎಂದು ಹೇಳಿದರು.