ಬೆಂಗಳೂರು,ನ.22- ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇದೇ 26 ಮತ್ತು 27ರಂದು ಗಾಂಧಿಭವನ ಬಾಪು ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ನಡೆಸಲಾಗುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ, ಸಮಾನ ಕೆಲಸಕ್ಕೆ ಸಮಾನ ವೇತನ, 6ನೇ ವೇತನ ಆಯೋಗದ ನೌಕರ-ವಿರೋಧಿ ಶಿಫಾರಸುಗಳ ಕುರಿತು ರಾಷ್ಟ್ರೀಯ ವಿಚಾರಣ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಖ್ಯಾತ ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಅವರು ಸಭೆ ಉದ್ಘಾಟಿಸಲಿದ್ದು, ಅ..ಕ.ರಾ.ಸ.ನೌ ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವಯ್ಯ ಮಠಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಒಕ್ಕೂಟದ ಅಧ್ಯಕ್ಷ ಸುಭಾಷ್ ಲಂಬಾ, ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ್, ರಾಷ್ಟ್ರೀಯ ಉಪಾಧ್ಯಕ್ಷ ಡಿ.ಶಿವಕುಮಾರ್, ಗೌರವ ಅಧ್ಯಕ್ಷ ಎಸ್.ರೇಣುಕಾರಾಧ್ಯ, ಕಾರ್ಯಾಧ್ಯಕ್ಷ ಎಲ್.ಇ.ನಟರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಪಿಂಚಣಿ ಯೋಜನೆ ರದ್ದುಗೊಳಿಸುವುದು, 6ನೇ ವೇತನ ಆಯೋಗದ ವರದಿಯಲ್ಲಿನ ನೌಕರ ವಿರೋಧಿ ಶಿಫಾರಸುಗಳನ್ನು ಕೈ ಬಿಡುವುದು, ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ದಿನಗೂಲಿ/ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ದಿನಗೂಲಿ ಹೊರಗುತ್ತಿಗೆ ನೌಕರರನ್ನು ನಿಯಮಾನುಸಾರ ಖಾಯಂಗೊಳಿಸುವುದು, ಇನ್ನು ಮುಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹೊರಗುತ್ತಿಗೆ ಉದ್ಯೋಗಿಗಳನ್ನು ರದ್ದುಗೊಳಿಸುವುದು, ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.
ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮತ್ತು ಇತರ ವಿವಿಧ ರಾಜ್ಯಗಳ ನೌಕರರ ಮುಖಂಡರು ಭಾಗವಹಿಸಿ ನೌಕರರ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಒಕ್ಕೂಟದ ಉಪಾಧ್ಯಕ್ಷ ಎಂ.ವೆಂಕಟೇಶ್, ರಾಷ್ಟ್ರೀಯ ಉಪಾಧ್ಯಕ್ಷ ಡಿ.ಶಿವಕುಮಾರ್ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಜೈಕುಮಾರ್ ಸೇರಿದಂತೆ ಮತ್ತಿತರರು ಗೋಷ್ಠಿಯಲ್ಲಿದ್ದರು.