ಗೌರಿ ಲಂಕೇಶ್ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆ : ಡಾ.ಜಿ.ಪರಮೇಶ್ವರ್

ಬೆಂಗಳೂರು,ನ.24- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಪ್ರಕರಣಕ್ಕೆ ಸಂಬಂಧಿಸಿದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿವರ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಗೃಹಸಚಿವರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಮಿಳುನಾಡಿನ ಡಿಜಿಪಿ ಗಾಂಧಿರಾಜನ್ ಅವರಿಂದ ಇನ್‍ಸೈಡ್ ಪ್ರಿಜóನ್ ಕೃತಿಯನ್ನು ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೋಷಾರೋಪ ಪಟ್ಟಿಯಲ್ಲಿ ಕೆಲವು ಸಂಘಸಂಸ್ಥೆಗಳ ಹೆಸರು ಪ್ರಸ್ತಾಪವಾಗಿದ್ದು, ಈ ಕುರಿತು ಚರ್ಚೆ ನಡೆಸಬೇಕಿದೆ. ಶೀಘ್ರವೇ ಈ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆರು ತಿಂಗಳು ಕಳೆದರೂ ಸರ್ಕಾರ ಟೇಕಾಫ್ ಆಗಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರು ಅಸಮಾಧಾನಗೊಂಡಿರುವ ಬಗ್ಗೆಯೂ ತಿಳಿದಿಲ್ಲ. ಅವರಿಂದಲೇ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ವೈಯಕ್ತಿಕ ಅಥವಾ ಕ್ಷೇತ್ರದ ಕೆಲಸವಿದ್ದರೆ ತಮ್ಮೊಂದಿಗೆ ಮಾತನಾಡಬಹುದು. ಈ ಬಗ್ಗೆ ಬಹಿರಂಗ ಹೇಳಿಕೆ ನೀಡುವುದು ಒಳ್ಳೆಯದಲ್ಲ ಎಂದು ಹೇಳಿದ ಅವರು, ಬೆಳಗಾವಿ ಅಧಿವೇಶನಕ್ಕೆ ಕಾಂಗ್ರೆಸ್ ಶಾಸಕರು ಗೈರು ಹಾಜರಾಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಯಾವ ಶಾಸಕರು ಈ ರೀತಿಯ ಹೇಳಿಕೆ ನೀಡಿಲ್ಲ. ಪಕ್ಷದ ಅಧ್ಯಕ್ಷರ ಗಮನಕ್ಕೆ ತಂದಿದ್ದಾರೋ ಎಂಬುದು ಗೊತ್ತಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ