ಬೆಂಗಳೂರು, ಡಿ.4- ನೇಕಾರ ಸಮುದಾಯದ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ವಿವಿಧ ಮಠಾಧೀಶರ ನಿಯೋಗ ಇಂದು ಕಾಂಗ್ರೆಸ್ನ ಪ್ರಮುಖ ನಾಯಕರನ್ನು ಭೇಟಿ ಮಾಡಿ ಒತ್ತಾಯಿಸಿದೆ.
ಶ್ರೀ ಬಸವರಾಜ ಪಟ್ಟದಾರ್ಯ ಸ್ವಾಮೀಜಿ, ಶ್ರೀ ದಯಾನಂದಪುರಿ ಸ್ವಾಮೀಜಿ, ಶ್ರೀ ದಿವ್ಯಜ್ಞಾನಂದಗಿರಿ ಸ್ವಾಮೀಜಿ, ಶ್ರೀ ಪ್ರಭುಲಿಂಗ ಸ್ವಾಮೀಜಿ, ಶ್ರೀ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಘನಲಿಂಗ ಸ್ವಾಮೀಜಿ ಅವರುಗಳ ನೇತೃತ್ವದಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಅವರು ಇಂದು ಬೆಳಗ್ಗೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರುಗಳನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ಹಿಂದಿನ ಸರ್ಕಾರದಲ್ಲಿ ಉಮಾಶ್ರೀ ಅವರು ಸಚಿವರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದಾರೆ. ಹೀಗಾಗಿ ಸಂಪುಟದಲ್ಲಿ ನೇಕಾರ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲದಂತಾಗಿದೆ.ಕೆ.ಸಿ.ಕೊಂಡಯ್ಯ ಅವರು ಮೂರು ದಶಕಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ.ಸಂಸದರಾಗಿ, ರಾಜ್ಯಸಭೆ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.ನೇಕಾರ ಸಮುದಾಯದ ಒಳಪಂಗಡಗಳನ್ನು ಒಗ್ಗೂಡಿಸಿದ ಹೆಗ್ಗಳಿಕೆಯೂ ಕೊಂಡಯ್ಯ ಅವರಿಗಿದೆ. ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿರುವ ಅವರನ್ನು ಈವರೆಗೂ ಸಚಿವರನ್ನಾಗಿ ಮಾಡಿಲ್ಲ. ಈ ಬಾರಿ ಸಮುದಾಯಕ್ಕೆ ಆದ್ಯತೆ ಕೊಡುವ ಸಲುವಾಗಿ ಕೊಂಡಯ್ಯ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ನಿಯೋಗ ನಾಯಕರಲ್ಲಿ ಮನವಿ ಮಾಡಿದೆ.