ಬೆಂಗಳೂರು,ಡಿ.5-ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನು ಶೀಘ್ರವಾಗಿ ನೇಮಕ ಮಾಡುವ ಭರವಸೆಯನ್ನು ಜೆಡಿಎಸ್ ವರಿಷ್ಠರು ನೀಡಿದ್ದಾರೆ.
ನಿನ್ನೆ ಖಾಸಗಿ ಹೋಟೆಲ್‍ನಲ್ಲಿ ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜಕೀಯವಾಗಿ ಕೇಳಿ ಬರುವ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಆಪರೇಷನ್ ಕಮಲದ ಬಗ್ಗೆಯೂ ಚಿಂತೆ ಮಾಡದೆ ಎಲ್ಲರೂ ಒಗ್ಗಟ್ಟಿನಿಂದ ಇರುವಂತೆ ಸಲಹೆ ಮಾಡಿದ್ದಾರೆ.
ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ಸಂಪುಟ ವಿಸ್ತರಣೆ ಹಾಗೂ ನಿಗಮಮಂಡಳಿಗಳ ನೇಮಕವನ್ನು ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಟ್ಟಾಗಿ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.
ಜೆಡಿಎಸ್‍ನಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಗಳಲ್ಲಿ ಒಂದನ್ನು ಅಲ್ಪಸಂಖ್ಯಾತ ಮತ್ತು ಪರಿಶಿಷ್ಟ ಸಮುದಾಯದವರಿಗೆ ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.
ಈ ಸಂದರ್ಭದಲ್ಲಿ ಕೆಲವು ಶಾಸಕರು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡಲೇಬೇಕೆಂದು ಒತ್ತಾಯಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಎರಡು ಸಚಿವ ಸ್ಥಾನವನ್ನು ಭರ್ತಿ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ವಿಧಾನಪರಿಷತ್‍ನ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಅಲ್ಲದೆ ಮುಖ್ಯಮಂತ್ರಿಗಳ ರಾಜಕೀಯ ಹಾಗೂ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಭರವಸೆಯನ್ನು ಕೂಡ ನೀಡಿದ್ದಾರೆ.
ವಿಧಾನಪರಿಷತ್‍ನ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಇದೇ ಸ್ಥಾನದಲ್ಲಿ ಮುಂದುವರೆಸುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರ ಹುದ್ದೆಗಳನ್ನು ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾಗಿದೆ.
ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚಿಂತೆ ಮಾಡದೆ ಬೆಳಗಾವಿಯಲ್ಲಿ ನಡೆಯುವ ಅಧಿವೇಶನವನ್ನು ಯಶಸ್ವಿಗೊಳಿಸಲು ಹಾಗೂ ಪಕ್ಷ ಸಂಘಟನೆಗೆ ಶಾಸಕರು ಒತ್ತು ನೀಡಬೇಕು. ಸಮ್ಮಿಶ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಲ್ಲಿ ಜಾಗೃತಿ ಮಾಡಿಸುವ ಕೆಲಸವನ್ನು ಮಾಡಬೇಕು ಎಂಬ ಸಲಹೆಯನ್ನು ಕೂಡ ವರಿಷ್ಠರು ಮಾಡಿದ್ದಾರೆ ಎಂದು ತಿಳಿದುಬಂದಿದೆ.