ಬೆಂಗಳೂರು, ಡಿ.5-ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕಾತಿ, ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದರು.
ಸಂಜೆ ಸಮನ್ವಯ ಸಮಿತಿ ಸಭೆಗೂ ಮುನ್ನ ಕಾಂಗ್ರೆಸ್ ಕಚೇರಿಯಲ್ಲಿ ಹಿರಿಯ ನಾಯಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಅವರು, ಆನಂತರ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.
ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಈ ವಾರಂತ್ಯದೊಳಗೆ ನಡೆಯುವ ಸಾಧ್ಯತೆ ಇರುವುದರಿಂದ ಅದಕ್ಕೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸಮಾಲೋಚನೆ ನಡೆಸಿದರು.
ಮಲ್ಲಿಕಾರ್ಜುನ್ ಖರ್ಗೆ, ಉಪಮುಖ್ಯಮಂತ್ರಿ ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾಜ್, ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಪ್ರಮುಖ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿತ್ತು.
ಸಭೆಯಲ್ಲಿ ಸಂಪುಟ ವಿಸ್ತರಣೆಯಾದರೆ ಯಾರನ್ನೆಲ್ಲ ಸಂಪುಟಕ್ಕೆ ತೆಗೆದುಕೊಂಡರೆ ಒಳ್ಳೆಯದು ಎಂಬ ಚರ್ಚೆ ನಡೆದಿದೆ. ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಶಾಸಕರು ತೀವ್ರ ಒತ್ತಡ ಹೇರುತ್ತಿದ್ದಾರೆ.ಹೀಗಾಗಿ ಸಾಮಾಜಿಕ ನ್ಯಾಯ ಮತ್ತು ಭೌಗೋಳಿಕ ವಿಸ್ತೀರ್ಣದ ಆಧಾರದ ಮೇಲೆ ಆದ್ಯತೆ ನೀಡಲು ಮುಂದಾದರೆ ಬಹಳಷ್ಟು ಮಂದಿ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ.ಆದರೆ ಸಂಪುಟದಲ್ಲಿ ಖಾಲಿ ಇರುವುದು ಕೇವಲ 6 ಸ್ಥಾನ ಮಾತ್ರ.ಅದರಲ್ಲಿ ವಿಸ್ತರಣೆಯಾದರೆ ನಾಲ್ಕು ಮಂದಿಯನ್ನು ಮಾತ್ರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.ಎಲ್ಲರಿಗೂ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆ ಇಡಲಾಗುತ್ತದೆ.ಸಂಪುಟ ವಿಸ್ತರಣೆ ನಂತರ ಭುಗಿಲೇಳಬಹುದಾದ ಅಸಮಾಧಾನವನ್ನು ತಣಿಸುವ ಜವಾಬ್ದಾರಿಯನ್ನು ಪ್ರಮುಖ ನಾಯಕರಿಗೆ ಇಂದಿನ ಸಭೆಯಲ್ಲಿ ವಹಿಸಲಾಗಿದೆ.ಚುನಾವಣೆಗೂ ಮುನ್ನ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸಿದ್ದ ನಾಯಕರು ಸಂಪುಟ ವಿಸ್ತರಣೆ ವೇಳೆ ಉಂಟಾಗಬಹುದಾದ ಅಸಮಾಧಾನ ನಿವಾರಿಸಲೂ ಮುಂದಾಗಬೇಕು.ತಮ್ಮ ಬೆಂಬಲಿಗ ಶಾಸಕರನ್ನು ಸಮಾಧಾನ ಪಡಿಸಿ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗದಂತೆ ಸಹಕಾರ ನೀಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸಂಪುಟ ವಿಸ್ತರಣೆಗೂ ಮುನ್ನ ನಿಗಮ ಮಂಡಳಿ ನೇಮಕಾತಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿದ್ದು, ಒಂದೆರಡು ದಿನಗಳಲ್ಲಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಸಲುವಾಗಿ ಇಂದು ಕಾಂಗ್ರೆಸ್ ಹಿರಿಯ ನಾಯಕರ ಜೊತೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.
ಸಂಜೆ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಶಾಸಕರ ಬಂಡಾಯ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.