ಬೆಂಗಳೂರು, ಡಿ.6- ಮೂಗಿನ ಸಣ್ಣ ಶಸ್ತ್ರ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿ ಕೋಮಾ ತಲುಪಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಗಾಯ್ಪುರಂ ವಾರ್ಡ್ನ ಬಿಬಿಎಂಪಿ ಸದಸ್ಯ ಏಳುಮಲೈ ಇಹಲೋಕ ತ್ಯಜಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳುಮಲೈ ಅವರು ಮುಂಜಾನೆ 1.30ರಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಮೂಲತಃ ಕಾಂಗ್ರೆಸಿಗರಾಗಿದ್ದ ಏಳುಮಲೈ ಅವರು ಕಳೆದ ಬಿಬಿಎಂಪಿ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಸದಸ್ಯರಾಗಿ ಸ್ಪರ್ಧಿಸಿ ಪ್ರಮುಖ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಪರಾಭವಗೊಳಿಸಿ ಬಿಬಿಎಂಪಿ ಸದಸ್ಯರಾಗಿ ಆರಿಸಿ ಬಂದಿದ್ದರು.
ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಆಡಳಿತಕ್ಕೆ ಬರುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಏಳುಮಲೈ ಅವರು ಬಿಬಿಎಂಪಿ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಆಡಳಿತದಲ್ಲಿ ಮತ್ತೆ ಪ್ರಮುಖ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಏಳುಮಲೈ ಅವರು ತಮ್ಮ ಮೂಗಿನಲ್ಲಿ ಕಾಣಿಸಿಕೊಂಡ ಸಣ್ಣ ಗುಳ್ಳೆಯ ಶಸ್ತ್ರ ಚಿಕಿತ್ಸೆಗಾಗಿ ಸಮೀಪದ ಸಂತೋಷ್ ಆಸ್ಪತ್ರೆಗೆ ದಾಖಲಾಗಿದ್ದರು.
ಕೇವಲ ಅರ್ಧ ಗಂಟೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಮನೆಗೆ ಕಳುಹಿಸುವುದಾಗಿ ಆಶ್ವಾಸನೆ ನೀಡಿದ್ದ ವೈದ್ಯರು ಆಪರೇಷನ್ ಸಂದರ್ಭದಲ್ಲಿ ಏಳುಮಲೈ ಅವರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಬಹು ಅಂಗಾಂಗ ವೈಫಲ್ಯ ಕಾಣಿಸಿಕೊಂಡು ಕೋಮಾ ಸ್ಥಿತಿ ತಲುಪಿದ್ದಾರೆ ಎಂದು ತಿಳಿಸಿದ್ದರು.
ಆದರೆ, ಏಳುಮಲೈ ಕುಟುಂಬವರ್ಗದವರು ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಅನಸ್ತೇಷಿಯಾ ನೀಡುವುದರಲ್ಲಿ ಏರುಪೇರಾಗಿ ಅವರು ಕೋಮಾ ತಲುಪಿದ್ದಾರೆ.ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದರು.
ಏಳುಮಲೈ ಕುಟುಂಬವರ್ಗದವರ ಆರೋಪದ ಮೇರೆಗೆ ಸಂತೋಷ್ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಕಳೆದ ಬಿಬಿಎಂಪಿ ಸಭೆಯಲ್ಲಿ ಚರ್ಚೆಯಾಗಿತ್ತು.
ಸಂತೋಷ್ ಆಸ್ಪತ್ರೆಯಿಂದ ಏಳುಮಲೈ ಅವರನ್ನು ವಿಕ್ರಮ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಏಳುಮಲೈ ಅವರು ಮುಂಜಾನೆ ಅಸುನೀಗಿದ್ದಾರೆ ಎಂದು ವೈದ್ಯರು ದೃಢೀಕರಿಸಿದ್ದಾರೆ.
ರಜೆ ಘೋಷಣೆ: ಏಳುಮಲೈ ಅವರ ನಿಧನದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಚೇರಿಗೆ ರಜೆ ನೀಡಲಾಗಿದೆ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಘೋಷಿಸಿದ್ದಾರೆ.
ಸಂತಾಪ: ಏಳುಮಲೈ ಅವರ ಅಕಾಲಿಕ ನಿಧನಕ್ಕೆ ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್, ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ, ಜೆಡಿಎಸ್ ಗುಂಪಿನ ನಾಯಕಿ ನೇತ್ರಾ ನಾರಾಯಣ್ ಮತ್ತಿತರರು ಸಂತಾಪ ವ್ಯಕ್ತಪಡಿಸಿ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.