ಪಾಲ್ಘಾನ್;ಮಾ-8: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್’ನಲ್ಲಿ ನಡೆದಿದೆ.
ತಾರಾಪುರ್ ಎಂಐಡಿಸಿ ಪ್ರದೇಶದಲ್ಲಿರುವ ಖಾಸಗಿ ರಾಸಾಯನಿಕ ಕಾರ್ಖಾನೆಯಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದ ಕಾರ್ಖಾನೆ ಹೊತ್ತುಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿಯೇ ಇರುವ ಎರಡು ಕಾರ್ಖಾನೆಗಳಿಗೂ ಬೆಂಕಿ ಆವರಿಸಿದ್ದು, ಅವುಗಳೂ ಹಾನಿಗೊಳಗಾಗಿವೆ.
ಘಟನೆ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ವೇಳೆ ಐವರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.