ಅಧಿವೇಶನ ಮುಗಿಯುವುದರೊಳಗೆ ಸದಾಶಿವ ಆಯೋಗ ವರದಿ ಜಾರಿಗೊಳಿಸದಿದ್ದರೆ, ಉಗ್ರ ಹೋರಾಟ

ಬೆಳಗಾವಿ,ಡಿ.18- ಪರಿಶಿಷ್ಟ ಜಾತಿಗಳ ಜನಸಂಖ್ಯೆವಾರು ಮೀಸಲಾತಿ ಹಂಚಿಕೆ ಮಾಡಿ ನ್ಯಾ.ಎ.ಜೆ. ಸದಾಶಿವ ಅವರ ಶಿಫಾರಸು ಜಾರಿಗೊಳಿಸಲು ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಹೆಚ್. ಹನುಮಂತಪ್ಪ ಬಳ್ಳಾರಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಜನಾಂಗಕ್ಕೆ ಮೋಸವಾಗುತ್ತ ಬರುತ್ತಿದೆ. ಸದಾಶಿವ ಆಯೋಗದ ವರದಿ ಜಾರಿ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರಿಕೊಂಡೆ ಬಂದಿದ್ದೇವೆ. ಈ ಹಿಂದಿನ ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರ ಆಯೋಗದ ವರದಿ ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಅವರ ಆಡಳಿತ ಮುಗಿದರೂ ಜಾರಿ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಂತರ ಸಿಎಂ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದಾಗ ಅವರು ಸಹ ಎರಡು ತಿಂಗಳು ಕಾಲಾವಕಾಶ ಕೇಳಿದ್ದರು. ಆದರೆ, ಅರು ತಿಂಗಳು ಕಳೆದರೂ ಜಾರಿ ಮಾಡಿಲ್ಲ. ಇದೇ ರೀತಿ ಸರ್ಕಾರ ವಿಳಂಬ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಅಧಿವೇಶನ ಮುಗಿಯುವುದರೊಳಗೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವ ಮೂಲಕ ಎಲ್ಲ ಪಕ್ಷಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಹೇಳಿದರು.
ವಿರೋಧ ಪಕ್ಷದವರೂ ಸಹ ಈ ವಿಷಯವನ್ನು ಸದನದಲ್ಲಿ ಚರ್ಚಿಸಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಹನುಮಂತಪ್ಪ ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ