ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ ಎಚ್.ಎಂ.ರೇವಣ್ಣ

ಬೆಂಗಳೂರು, ಜ.2-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಎಚ್.ಎಂ.ರೇವಣ್ಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನವೂ ಸಿಕ್ಕಿಲ್ಲ. ತಮ್ಮ ವಿಧಾನಪರಿಷತ್ ಅವಧಿಯೂ ಕೂಡ ಮುಗಿಯುತ್ತಾ ಬಂದಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಟಿಕೆಟ್ ನೀಡುವಂತೆ ಪಕ್ಷದ ನಾಯಕರಲ್ಲಿ ಮನವಿ ಮಾಡಿದ್ದೇನೆ ಎಂದ ಅವರು, ಈ ಸಂಬಂಧ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ತಿಳಿಸಿದರು.

ತಾವು ಮಾಗಡಿ ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳನ್ನು ಪಕ್ಷದ ವರಿಷ್ಠರ ಸೂಚನೆಯಂತೆ ಬೇರೆಯವರಿಗೆ ಬಿಟ್ಟುಕೊಟ್ಟು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದೆ ಎಂದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇದ್ದಾರೆ. 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಾಗಿದೆ.ಈ ಎಲ್ಲಾ ಹಿನ್ನೆಲೆಯಲ್ಲಿ ತಮಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಮನವಿ ಮಾಡಲಾಗುತ್ತಿದೆ.ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ