ಕುಕ್ಕರ್ ಸಿಡಿದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಚಿವರು

ಮೈಸೂರು, ಜ.2-ಬಿಸಿಯೂಟ ಸಿದ್ದಪಡಿಸುವ ಸಂದರ್ಭದಲ್ಲಿ ಕುಕ್ಕರ್ ಸಿಡಿದು ಗಾಯಗೊಂಡು ನಗರದ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸಿಂಗಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿಂಚನಾ(9) ಕುಕ್ಕರ್ ಸಿಡಿದು ಗಾಯಗೊಂಡು ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾಳೆ.

ನಿನ್ನೆ ಶಾಲೆಯಲ್ಲಿ ಕುಕ್ಕರ್ ಸ್ಫೋಟವಾದ ವೇಳೆ ಈಕೆ ಗಾಯಗೊಂಡಿದ್ದಳು.ಮೊದಲು ಮಂಡ್ಯದ ಮಿನ್ಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿದು ಇಂದು ಸಿ.ಎಸ್.ಪುಟ್ಟರಾಜು ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಆರೋಗ್ಯ ವಿಚರಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಊಟ ತಯಾರಿಕೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಡುಗೆ ಕೋಣೆಗೆ ಬಾರದಂತೆ ನೋಡಿಕೊಳ್ಳಬೇಕು ಹಾಗೂ ಅಡುಗೆಗೂ ವಿದ್ಯಾರ್ಥಿಗಳ ನೆರವು ಪಡೆಯದಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗುವುದು ಎಂದು ಹೇಳಿದರು.

ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ