ಶೀಘ್ರವೇ ಬಗೆಹರಿಯಲಿರುವ ಸಮಸ್ಯೆಗಳು, ಸರರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ, ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು,ಜ.5- ನಿಗಮ ಮಂಡಳಿ ಹಂಚಿಕೆ ವಿಚಾರದ ಸಣ್ಣಪುಟ್ಟ ಸಮಸ್ಯೆಗಳು ಶೀಘ್ರವೇ ಬಗೆಹರಿಯಲಿದ್ದು, ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಬರುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಎರಡುಮೂರು ನಿಗಮಮಂಡಳಿ ವಿಚಾರದಲ್ಲಿ ಅಭಿಪ್ರಾಯ ಬೇಧವಿದ್ದು, ಇದರ ಬಗ್ಗೆ ಉಭಯ ಪಕ್ಷಗಳ ನಾಯಕರು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ನಿಗಮ ಮಂಡಳಿ ವಿಚಾರದಲ್ಲಿ ಉದ್ರೇಕದಿಂದ ಮಾತನಾಡಿದರೆ ಪ್ರಯೋಜನವಿಲ್ಲ ಎಂದರು.

ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್ ಸೇರಿದಂತೆ ಉಭಯ ಪಕ್ಷಗಳ ನಾಯಕರು ಸರ್ಕಾರದಲ್ಲಿನ ಏರುಪೇರನ್ನು ಸರಿಪಡಿಸಲಿದ್ದಾರೆ.ರಾಷ್ಟ್ರೀಯ ಮಟ್ಟದಲ್ಲಿ ತಾವು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಸಮಾಲೋಚನೆ ಮಾಡುತ್ತೇವೆ ಎಂದರು.

ಮೈತ್ರಿ ಸರ್ಕಾರದಲ್ಲಿ ನಮ್ಮನ್ನು ಸರಿಯಾಗಿ ನಡೆಸಿಕೊಂಡು ಹೋಗಬೇಕು.ಒಂದಿರಲಿ ಅಥವಾ ಎರಡಿರಲಿ ನಮ್ಮದೂ ಒಂದು ಪಕ್ಷ ಎಂದು ಹೇಳಿದರು.
ತಾವು ಅಧಿಕಾರದಲ್ಲಿದಾಗ ಬೆಂಗಳೂರು ಹಾಗೂ ರಾಜ್ಯಕ್ಕೆ ಮಾಡಿರುವ ಕೊಡುಗೆಗಳನ್ನು ಜನರ ಬಳಿಗೆ ಕೊಂಡೊಯ್ದು ಮನವರಿಕೆ ಮಾಡಿಕೊಳ್ಳಲಾಗುವುದು. ಪಕ್ಷದಲ್ಲಿ ಎಲ್ಲರೂ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬಂದು ಅನೇಕ ಪಕ್ಷದ ವಿವಿಧ ಘಟಕಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 37 ಕ್ಷೇತ್ರಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದ್ದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು. ಶಾಸಕರನ್ನು ಒಳಗೊಂಡಂತೆ ಇನ್ನು ಎರಡು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವುದರ ಜೊತೆಗೆ ಪಕ್ಷದ ಸಂಘಟನೆಗೂ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ನಾವು ಪ್ರಧಾನಿಯಾಗಿದ್ದಾಗ ಉತ್ತರಭಾರತ, ಕಾಶ್ಮೀರ ಹಾಗೂ ಬೆಂಗಳೂರಿಗೆ ಮಾಡಿರುವ ಕೆಲಸಗಳ ಬಗ್ಗೆ ಯುವಕರಿಗೆ ತಿಳಿಸಬೇಕಿದೆ. ಮಹಿಳಾ ಮೀಸಲಾತಿಗೆ ರಾಜ್ಯಸಭೆಯಲ್ಲಿ ಸಾಕಷ್ಟು ಚರ್ಚೆಯಾಗಿದೆ. ಯಾರೂ ಈ ಮೀಸಲಾತಿ ತಂದಿದ್ದು ಎಂಬ ಬಗ್ಗೆ ಎಲ್ಲರೂ ತಿಳಿಯಬೇಕು ಎಂದರು.

ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಮೋದಿ ಅವರು ಸುದ್ದಿಗೋಷ್ಠಿಯನ್ನೇ ಮಾಡಿಲ್ಲ. ಆದರೆ ಸುದ್ದಿ ಸಂಸ್ಥೆ ಕುರಿತಂತೆ ಈಗ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ, ಬೆಂಗಳುರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಅವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ