ಸರ್ಕಾರದ ವಿರುದ್ಧ ಹೊರಗುತ್ತಿಗೆ ನೌಕರರ ಸಂಘದಿಂದ ಸಾಮೂಹಿಕ ಧರಣಿ

ಬೆಂಗಳೂರು, ಫೆ.6- ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದುಡಿಯುತ್ತಿರುವ ನಾಲ್ಕು ಸಾವಿರ ಹೊರ ಸಂಪನ್ಮೂಲ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದುಹಾಕಲು ತೀರ್ಮಾನಿಸಿರುವ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಇಂದಿನಿಂದ ಅನಿರ್ದಿಷ್ಟಾವಧಿ ಸಾಮೂಹಿಕ ಧರಣಿ ನಡೆಸಲು ತೀರ್ಮಾನಿಸಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಹೊರ ಸಂಪನ್ಮೂಲ ಸಿಬ್ಬಂದಿಗಳು ಸಿಟಿ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಡಿ ದರ್ಜೆ ನೌಕರರಾಗಿ ದುಡಿಯುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳು ಕಳೆದ ಜೂನ್‍ನಲ್ಲಿ ಎಂಟು ದಿನಗಳ ಅಹೋರಾತ್ರಿ ಧರಣಿ ನಡೆಸಿ ನಿವೃತ್ತಿಯಾಗುವವರೆಗೂ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದರು.

ಸಿಬ್ಬಂದಿಗಳ ಒತ್ತಾಯಕ್ಕೆ ಮಣಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೌಕರರ ಬೇಡಿಕೆ ಈಡೇರಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದರು.ಆದರೆ, ಸಿಎಂ ಆದೇಶ ನೀಡಿದ ಆರು ತಿಂಗಳ ನಂತರ ಮತ್ತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ ದುಡಿಯುತ್ತಿರುವ ನಾಲ್ಕು ಸಾವಿರ ಹೊರಗುತ್ತಿಗೆ ನೌಕರರನ್ನು ತೆಗೆದುಹಾಕುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ನಿತ್ಯಾನಂದಸ್ವಾಮಿ ತಿಳಿಸಿದರು.
ಸಿಎಂ ಆದೇಶದ ನಂತರವೂ ನಾಲ್ಕು ಸಾವಿರ ಹೊರಗುತ್ತಿಗೆ ನೌಕರರ ಜೀವನದ ಜತೆ ಚೆಲ್ಲಾಟವಾಡುತ್ತಿರುವ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಗಳ ಧೋರಣೆ ಖಂಡಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಹೊರಗುತ್ತಿಗೆ ಸಿಬ್ಬಂದಿಗಳನ್ನು ಸೇವೆಯಲ್ಲಿ ಮುಂದುವರಿಸಬೇಕು. ಈಗಾಗಲೇ ತೆಗೆದುಹಾಕಲ್ಪಟ್ಟಿರುವ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು.ಬಾಕಿ ಇರುವ ವೇತನ ಬಿಡುಗಡೆ ಮಾಡಬೇಕು.ನೌಕರರ ವೇತನದಲ್ಲಿ ಕಡಿತ ಮಾಡಲಾಗಿರುವ ಪಿಎಫ್ ಮತ್ತು ಇಎಸ್‍ಐ ಖಾತೆಗಳಿಗೆ ಜಮಾ ಮಾಡದ ಹಣವನ್ನು ಹಿಂದಿರುಗಿಸಬೇಕು.ಅಲ್ಲಿಯವರೆಗೂ ಹೋರಾಟ ಮುಂದುವರಿಸುವುದಾಗಿ ನಿತ್ಯಾನಂದಸ್ವಾಮಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ, ಸಹಕಾರ್ಯದರ್ಶಿ ಹನುಮೇಗೌಡ, ಖಜಾಂಚಿ ಚಂದ್ರಪ್ಪ ಹೊಸ್ಕೇರ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ