ಬೆಂಗಳೂರು, ಫೆ.15- ಪಾಲಿಕೆ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಶ್ರಮ ವಹಿಸಬೇಕು ಎಂದು ಬಿಬಿಎಂಪಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರಿಗೆ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎಲ್ಲ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ವಿದ್ಯಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪಾಷ ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಬಹುತೇಕ ಕೂಲಿ ಕಾರ್ಮಿಕರ ಮಕ್ಕಳು.ಅವರ ವಿದ್ಯಾಭ್ಯಾಸದ ಹೊಣೆ ನಿಮ್ಮ ಮೇಲಿದೆ.ನಿಮ್ಮ ಮೇಲೆ ಪೋಷಕರು ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಸಂಖ್ಯಾಬಲ, ಫಲಿತಾಂಶ, ಶಾಲಾ-ಕಾಲೇಜು, ಕಟ್ಟಡ ನಿರ್ವಹಣೆ, ದುರಸ್ತಿ, ಹೊಸ ಕಾಲೇಜುಗಳ ನಿರ್ಮಾಣದ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಿಬಿಎಂಪಿ ಶಾಲಾ-ಕಾಲೇಜುಗಳ ಬಳಿ ಸಿಸಿಟಿವಿ ಅಳವಡಿಸುವಂತೆ ಕೂಡಲೇ ಕ್ರಮ ಕೈಗೊಳ್ಳುವಂತೆಯೂ ವಿದ್ಯಾಧಿಕಾರಿಗಳಿಗೆ ಇಮ್ರಾನ್ ಪಾಷ ಸೂಚಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳು ಹಾಜರಿದ್ದರು.