ಜೆಡಿಎಸ್‍ನಿಂದ ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಲಲು ನಿರ್ಧಾರ

ಬೆಂಗಳೂರು, ಫೆ.22- ಲೋಕಸಭೆ ಚುನಾವಣಾಪೂರ್ವ ಮೈತ್ರಿಯನ್ನು ಕಾಂಗ್ರೆಸ್‍ನೊಂದಿಗೆ ಮಾಡಿಕೊಂಡು ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂಬ ಉದ್ದೇಶ ಹೊಂದಿರುವ ಜೆಡಿಎಸ್, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.

ಈ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‍ನ ಹಾಲಿ ಸಂಸದರೇ ಇರುವುದರಿಂದ ಈ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡಬೇಕೆಂಬ ಬೇಡಿಕೆಯನ್ನು ಕಾಂಗ್ರೆಸ್‍ನ ಮುಂದಿಟ್ಟಿದೆ. ಮಂಡ್ಯದಲ್ಲಿ ಕಾಂಗ್ರೆಸ್‍ನಿಂದ ಕೇಂದ್ರ ಮಾಜಿ ಸಚಿವ ಹಾಗೂ ಚಿತ್ರನಟ ಅಂಬರೀಶ್ ಅವರ ಪತ್ನಿ ನಟಿ ಸುಮಲತಾ ಅವರು ಸ್ಪರ್ಧೆಗಿಳಿಯುವ ಪ್ರಸ್ತಾಪವಾಗುತ್ತಿದೆ. ಜೆಡಿಎಸ್‍ನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ಹೆಚ್ಚಾಗಿದೆ.

ಉಭಯ ಪಕ್ಷಗಳ ನಾಯಕರ ನಡುವೆ ಸೀಟು ಹಂಚಿಕೆ ಕುರಿತಂತೆ ಮಾತುಕತೆಗಳು ಮುಂದುವರೆದಿದ್ದು, ಇನ್ನು ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಆದರೂ ಜೆಡಿಎಸ್ ನಾಯಕರು ಮಂಡ್ಯ ಹಾಗೂ ಹಾಸನ ಕ್ಷೇತ್ರಗಳನ್ನು ತಮಗೇ ಬಿಟ್ಟುಕೊಡಬೇಕೆಂಬ ಸಂದೇಶವನ್ನು ಕಡ್ಡಿ ಮುರಿದಂತೆ ಕಾಂಗ್ರೆಸ್ ನಾಯಕರಿಗೆ ರವಾನಿಸಿದ್ದಾರೆ.

ಈಗಾಗಲೇ ಮಂಡ್ಯ ಜಿಲ್ಲೆಯ ಹಲವು ನಾಯಕರು ಜೆಡಿಎಸ್‍ನ ಭದ್ರಕೋಟೆಯಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಉಳಿಸಿಕೊಳ್ಳಬೇಕು ಎಂಬ ಒತ್ತಡವನ್ನು ವರಿಷ್ಠರ ಮೇಲೆ ಹೇರುತ್ತಿದ್ದಾರೆ. ಅಲ್ಲದೆ ಬಹಿರಂಗವಾಗಿಯೂ ಪದೇ ಪದೇ ಪ್ರಸ್ತಾಪಿಸುತ್ತಲೂ ಇದ್ದಾರೆ.

ಈ ನಡುವೆ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರು, ಮುಖಂಡರನ್ನು ಸಂಪರ್ಕಿಸಿ ಚುನಾವಣಾ ಪೂರ್ವ ತಾಲೀಮನ್ನು ಕೂಡ ನಡೆಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನು ಅಂತಿಮ ನಿರ್ಧಾರವನ್ನು ಪ್ರಕಟಿಸದಿದ್ದರೂ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರ ಅಪೇಕ್ಷೆಯಂತೆ ಪಕ್ಷ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಆದರೂ ಕಾಂಗ್ರೆಸ್ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡುವ ಬಗ್ಗೆ ಇನ್ನು ಸ್ಪಷ್ಟ ನಿಲುವನ್ನು ಪ್ರಕಟಿಸಿಲ್ಲ.

ಹಾಸನ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಿದೆ. ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಪರ್ಧಿಸಿದರೆ ಬೆಂಬಲ ನೀಡುವುದಾಗಿಯೂ ಘೋಷಿಸಿದ್ದಾರೆ. ಆದರೆ ಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಫರ್ಧಿಸಿದರೆ ಬೆಂಬಲ ನೀಡುವುದಿಲ್ಲ ಎಂಬುದನ್ನು ಹಾಸನ ಕಾಂಗ್ರೆಸ್ ನಾಯಕರು ಈಗಾಗಲೇ ಬಹಿರಂಗವಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೊಂದಾಣಿಕೆಯಾಗದಿದ್ದರೆ ಲೋಕಸಭಾ ಚುನಾವಣೆಯನ್ನು ತ್ರಿಕೋನ ಸ್ಪರ್ಧೆಯಲ್ಲಿ ಎದುರಿಸಲು ಸಿದ್ಧವಿರುವುದಾಗಿ ತಿರುಗೇಟು ನೀಡಿದ್ದಾರೆ. ಇದರ ನಡುವೆಯೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಲೋಕಸಭೆ ಚುನಾವಣೆ ಪೂರ್ವ ಹೊಂದಾಣಿಕೆ ಕುರಿತಂತೆ ಹಗ್ಗಜಗ್ಗಾಟ ಮುಂದುವರೆದಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 10ರಿಂದ 12 ಕ್ಷೇತ್ರಗಳನ್ನು ಅದರಲ್ಲೂ ಹಳೇಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ನೀಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆ.

ಹಾಲಿ ಕಾಂಗ್ರೆಸ್ ಸಂಸದರಿರುವ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರೆದಿದ್ದು, ಅಂತಿಮವಾಗಿ ಉಭಯ ಪಕ್ಷಗಳ ನಡುವೆ ಚುನಾವಣಾ ಪೂರ್ವ ಹೊಂದಾಣಿಕೆ ಯಾವ ಹಂತಕ್ಕೆ ತಲುಪುತ್ತದೆ ಎಂಬುದನ್ನು ಕಾದು ನೋಡಬೇಕು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ