ಬೆಂಗಳೂರು, ಫೆ.24-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿಯಲು ಮಹಿಳೆಯರ ದಂಡೆ ಮುಂದು ಬಂದಿದೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾಅಮರನಾಥ್ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿಯಿರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಾಳೆವರೆಗೂ ವಿಸ್ತರಿಸಲಾಗಿದೆ ಎಂದು ಹೇಳಿದರು.
ಮಂಗಳೂರಿನಿಂದ ಮಮತಾಕಟ್ಟಿ, ವಿಜಯಪುರದಿಂದ ಕಾಂತಾನಾಯಕ್ ಅವರು ಟಿಕೆಟ್ ಕೇಳುತ್ತಿದ್ದಾರೆ. ಮಾಜಿಸಚಿವ ಎಚ್.ವೈ. ಮೇಟಿ ಅವರ ಪುತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಪತ್ನಿ ಗೀತಾ, ಸಂಸದ ಕೆ.ಎಚ್.ಮುನಿಯಪ್ಪ ಅವರು ಪುತ್ರಿ ರೂಪಾಶಶಿಧರ, ಮಾಜಿಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ ಮತ್ತು ವಸಂತ ಗೀತಾ ಅವರುಗಳು ಟಿಕೆಟ್ ಕೇಳುತ್ತಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಪತ್ನಿ ತಬೂ ಅವರು ಲೋಕಸಭಾ ಚುನಾವಣೆಗೆ ಆಸಕ್ತರಾಗಿದ್ದಾರೆ ಎಂಬುದು ಸುಳ್ಳು. ಈಗಾಗಲೇ ತಾವು ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇಷ್ಟೇ ಅಲ್ಲದೆ ಹಲವಾರು ಮಂದಿ ಮಹಿಳೆಯರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದೆ ಬಂದಿದ್ದಾರೆ. ಮಹಿಳೆಯರಿಗೆ ಶೇ. 33ರಷ್ಟು ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂದು ಕೇಳಿಕೊಳ್ಳುತ್ತಿದ್ದೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆಯನ್ನು ಇಟ್ಟುಕೊಂಡು ಫೆ. 26ರಂದು ಮಂಗಳೂರಿನಲ್ಲಿ ಬೃಹತ್ ರ್ಯಾಲಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಪ್ಸರಾ ರೆಡ್ಡಿ ಮಾತನಾಡಿ ಮಹಿಳಾ ಮೀಸಲಾತಿ ಜಾರಿಗೊಳಿಸದ ಕೇಂದ್ರ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.