ಮೈಸೂರು, ಮಾ.11-ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಸರ್ಕಾರಿ ವಾಹನವನ್ನು ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೈಸೂರು ಜಿಲ್ಲಾ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳು ನಿಗಮ ಮಂಡಳಿಗಳು, ಸರ್ಕಾರಿ ಉದ್ದಿಮೆಗಳು, ಸಹಕಾರ ಸಂಘಗಳು, ಒಕ್ಕೂಟ, ಮಾರುಕಟ್ಟೆ ವಲಯದ ಅಧ್ಯಕ್ಷರು ಉಪಾಧ್ಯಕ್ಷರಿಗೆ ನೀಡಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಾದ 24 ಗಂಟೆಯೊಳಗೆ ಜನಪ್ರತಿನಿಧಿಗಳಿಗೆ ಒದಗಿಸಿರುವ ಸರ್ಕಾರಿ ವಾಹನಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳು ಕಾರ್ಯಕ್ರಮಗಳಿಗೆ ಸಂಬಂಧಿಸಿದ ಫ್ಲೆಕ್ಸ್, ಹೋಲ್ಡಿಂಗ್ಸ್ಗಳು ಹಾಗೂ ಎಲ್ಲಾ ರೀತಿಯ ಪ್ರಚಾರ ಪ್ರದರ್ಶನ ಫಲಕಗಳನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ವರದಿ ನೀಡಬೇಕಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರ ಪಾಲಿಕೆಯ ಅಧಿಕಾರಿಗಳ ತಂಡ ಈಗಾಗಲೇ ಕಾರ್ಯಾಚರಣೆ ಕೈಗೊಂಡಿದೆ.