ಶ್ರೀನಗರ:ಮಾ-16: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿದಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಪುಲ್ವಾಮ ಜಿಲ್ಲೆಯ ಬಲ್ಹಮದ ಬಿಜೆಪಿ ನಾಯಕ ಅನ್ವರ್ ಖಾನ್ ಅವರನ್ನು ಹತ್ಯೆ ಮಾಡಲು ಉಗ್ರರು ಯತ್ನ ನಡೆಸಿದ್ದರು. ಈ ವೇಳೆ ಅನ್ವರ್ ಖಾನ್ ಅವರ ಭದ್ರತಾ ಸಿಬ್ಬಂದಿಗಳ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ಕಿತ್ತುಕೊಳ್ಳಲು ಯತ್ನ ನಡೆಸಿದ್ದಾರೆ. ಈ ವೇಳೆ ಅನ್ವರ್ ಖಾನ್ ಅವರ ಭದ್ರತಾ ಸಿಬ್ಬಂದಿ ಬಿಲಾಲ್ ಅಹ್ಮದ್ ಎಂಬುವವರು ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ದಾಳಿಯಲ್ಲಿ ಬಿಜೆಪಿ ನಾಯಕ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಅನ್ವರ್ ಖಾನ್ ಅವರ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪೊಲೀಸರು ಉಗ್ರರ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಹಮದ್ ಅವರು ಗಾಯಗೊಂಡಿದ್ದಾರೆ.
ಉಗ್ರರು ದಾಳಿ ನಡೆಸಿದ ಬಳಿಕ ಸ್ಥಳವನ್ನು ಸುತ್ತುವರೆದ ಸೇನಾ ಪಡೆಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಗ್ರರ ಕುರಿತ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ. ಅಲ್ಲದೇ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.