ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಮಾ.11-ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ವಿರಳವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಲೋಕಸಭೆ ಚುನಾವಣೆಯಲ್ಲಿ ಇದುವರೆಗೆ ಮೈತ್ರಿ ಕುರಿತ ಪ್ರಯತ್ನವನ್ನು ನಡೆಸಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಿಎಸ್‍ಪಿ ವಿಚಾರದಲ್ಲಿ ಇನ್ನೂ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಿಲ್ಲ. ಈ ನಡುವೆ ರಾಜ್ಯ ಬಿಎಸ್‍ಪಿ ನಾಯಕರು ಎಲ್ಲಾ 28 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಪ್ರಕಟಿಸಿದ್ದಾರೆ.

ಒಂದು ವೇಳೆ ಎಲ್ಲಾ ಕ್ಷೇತ್ರಗಳಲ್ಲೂ ಬಿಎಸ್‍ಪಿ ಸ್ಪರ್ಧೆ ಮಾಡಿದರೆ ಈ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗಿನ ಮೈತ್ರಿ ಇಲ್ಲದಂತಾಗಲಿದೆ. ಕಾಂಗ್ರೆಸ್‍ನೊಂದಿಗೆ ಸೀಟು ಹಂಚಿಕೆ ಮಾಡಿಕೊಂಡು ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ನಿಟ್ಟಿನಲ್ಲಿ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ.

ಬಿಎಸ್‍ಪಿಯೊಂದಿಗೆ ಮೈತ್ರಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್, ಬಿಎಸ್‍ಪಿಯವರು ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಎಸ್‍ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರೆಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ