ಉಪ ಮುಖ್ಯಮಂತ್ರಿ ಪರಮೇಶ್ವರ್ ಮಾತಿಗೆ ಬೆಲೆಯಿಲ್ಲ-ಕಾಂಗ್ರೇಸ್ ಕಾರ್ಯಕರ್ತರ ಆಕ್ರೋಶ

ತುಮಕೂರು, ಮಾ.15- ರಾಜ್ಯದಲ್ಲಿ ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಾ. ಜಿ.ಪರಮೇಶ್ವರ್ ಅವರು ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿದ್ದರೂ ಅವರ ಶಕ್ತಿ ದಿನೇ ದಿನೇ ಕುಂದುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಇವರ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ ಎಂದು ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿದೆ. ಇದರಿಂದ ಎಚ್ಚೆತ್ತುಕೊಂಡ ಉಪಮುಖ್ಯಮಂತ್ರಿ ಪರಮೇಶ್ವರ್, ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮುಖಾಂತರ ನಮ್ಮ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳ ಬೇಕಾಗಿದೆ ಎಂದು ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರದ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಉಪಮುಖ್ಯಮಂತ್ರಿಗಳ ತಮ್ಮ ಕ್ಷೇತ್ರ ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದಾರೆ ಎಂದು ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಳೆ ಇದರ ಬಗ್ಗೆ ಸಭೆ ಏರ್ಪಟ್ಟಿದ್ದು, ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿಯವರ ಹಾಗೂ ವೇಣುಗೋಪಾಲ್ ಅವರ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಪರಮೇಶ್ವರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರ ಈಗ ಜೆಡಿಎಸ್, ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿ ಪರಿಣಮಿಸಿದೆ. ಕೊನೆ ಕ್ಷಣದಲ್ಲಿ ಯಾರ ಮಡಿಲಿಗೆ ತುಮಕೂರು ಲೋಕಸಭಾ ಕ್ಷೇತ್ರ ಸೇರುತ್ತದೆ ಎಂಬುದು ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ತೀರ್ವ ಕುತೂಹಲ ಕೆರಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ