ಬೆಂಗಳೂರು, ಮಾ.20-ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆ ನಾಳೆಯಿಂದ ಪ್ರಾರಂಭವಾಗಲಿದ್ದು, ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸನ್ನದ್ಧರಾಗಿದ್ದಾರೆ.
ಮಾ.21 ರಿಂದ ಏ.4 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 8ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಸುಗಮವಾಗಿ ಪರೀಕ್ಷೆ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ನಮೂದಿಸಲಾಗುತ್ತಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದ್ದು, ಮೊಬೈಲ್, ಸ್ಮಾರ್ಟ್ಪೋನ್, ಸ್ಮಾರ್ಟ್ ವಾಚ್ಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮುನ್ನ 15 ನಿಮಿಷಗಳ ಕಾಲ ಪ್ರಶ್ನೆಪತ್ರಿಕೆ ಓದಲು ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೊಳಗಾಗದೆ ನಿರ್ಭೀತರಾಗಿ ಪರೀಕ್ಷೆಯನ್ನು ಬರೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.