ತುಮಕೂರು, ಮಾ.23-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.
ತುಮಕೂರಿನ ಮುಖಂಡರೊಂದಿಗೆ ಎರಡು ಮೂರು ಸುತ್ತಿನ ಮಾತುಕತೆ ನಡೆಸಿರುವ ಗೌಡರು, ಸ್ಪರ್ಧೆ ಬಗ್ಗೆ ಇದುವರೆಗೂ ಅಧಿಕೃತವಾಗಿ ಪ್ರಕಟಿಸಿಲ್ಲ.
ನಾಳೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಗೌಡರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ನಂತರ ಶ್ರೀಮಠದ ಮಠಾಧೀಶರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.
ಆದಿಚುಂಚನಗಿರಿ ಮಠಕ್ಕೂ ಭೇಟಿ ನೀಡಿ ಶ್ರೀಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ.
ಕ್ಷೇತ್ರದಲ್ಲಿ ಶ್ರೀ ಕಾಲಭೆರವೇಶ್ವರ ಸ್ವಾಮಿಗೆ ವಿಶೇಷ ಪೂಜೆಯನ್ನು ಗೌಡರು ನೆರವೇರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಇದೇ ಸಂದರ್ಭದಲ್ಲಿ ಪ್ರಮುಖ ಮುಖಂಡರೊಂದಿಗೂ ಸಮಾಲೋಚನೆ ನಡೆಸಿ ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಪ್ರಮುಖ ರಾಜಕೀಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಸೋಮವಾರ ಮಧ್ಯಾಹ್ನ ಸಚಿವರು, ಶಾಸಕರು ಹಾಗೂ ರಾಜಕೀಯ ಮುಖಂಡರೊಂದಿಗೆ ತುಮಕೂರು ನಗರದಲ್ಲಿ ಮೆರವಣಿಗೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಯಾಗಿ ಗೌಡರು ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹಲವು ದಿನಗಳಿಂದ ದೇವೇಗೌಡರ ಸ್ಪರ್ಧೆ ಬಗ್ಗೆ ಚರ್ಚೆಯಾಗುತ್ತಿದೆಯಾದರೂ ಯಾವ ಕ್ಷೇತ್ರವನ್ನು ಗೌಡರು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಬಗ್ಗೆ ತೀವ್ರ ಕುತೂಹಲ ಕೆರಳಿಸಿತ್ತು.
ಪ್ರಸ್ತುತ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಗುಟ್ಟು ಬಿಡದೆ ಗೌಪ್ಯತೆ ಕಾಪಾಡಿಕೊಂಡು ಬಂದಿರುವ ಗೌಡರು ತಮ್ಮ ಸ್ವಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್‍ಗೆ ಬಿಟ್ಟುಕೊಟ್ಟಿದ್ದಾರೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳೆರಡರಲ್ಲೂ ಸ್ಪರ್ಧೆ ಮಾಡುವಂತೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಒತ್ತಾಯಿಸುತ್ತಾ ಬಂದಿದ್ದಾರೆ.
ಈ ಎರಡೂ ಕ್ಷೇತ್ರಗಳಲ್ಲಿ ಸಮಾಲೋಚನೆ ನಡೆಸಿರುವ ಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಾಗುವುದು ಎಂಬುದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.