ಬೆಂಗಳೂರು,ಮಾ.26- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಇಂದು ತೆರೆಬಿದ್ದಿದ್ದು, ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನಿನ್ನೆಯವರೆಗೆ ಮೊದಲ ಹಂತದಲ್ಲಿ ಒಟ್ಟು 181 ಅಭ್ಯರ್ಥಿಗಳು, 231 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ನಿನ್ನೆ ಸೋಮವಾರವಾಗಿದ್ದರಿಂದ ನಾಮಪತ್ರಗಳ ಸುರಿಮಳೆಯಾಗಿದ್ದು, 14 ಕ್ಷೇತ್ರಗಳಲ್ಲಿ 109 ಅಭ್ಯರ್ಥಿಗಳು 148 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಮಾಜಿ ವಿ.ಶ್ರೀನಿವಾಸ್ಪ್ರಸಾದ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣಭೆರೇಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖರು ಇಂದು ನಾಮಪತ್ರ ಸಲ್ಲಿಸಿದರು.
ಬೆಂಗಳೂರುದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎಲ್.ಎಸ್.ತೇಜಸ್ವಿ ಸೂರ್ಯ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಕೆ.ಹರಿಪ್ರಸಾದ್ ಇಂದು ಜಯನಗರದ ಬಿಬಿಎಂಪಿ ಕಚೇರಿಯಲ್ಲಿ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ತೇಜಸ್ವಿ ಸೂರ್ಯ ಅವರು ಬಸವನಗುಡಿಯ ದೊಡ್ಡಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಿ.ಕೆ.ಹರಿಪ್ರಸಾದ್ ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ಕ್ಷೇತ್ರದಲ್ಲಿ ರ್ಯಾಲಿ ನಡೆಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಇಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ , ಸಂಸದ ಎಲ್.ಆರ್.ಶಿವರಾಮೇಗೌಡ, ಶಾಸಕರಾದ ಮುನಿರತ್ನ, ಮಂಜುನಾಥ್, ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಸೇರಿದಂತೆ ಉಭಯ ಪಕ್ಷಗಳ ಪ್ರಮುಖ ನಾಯಕರು, ಮುಖಂಡರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ರಾಮನಗರದ ಪಿಡಬ್ಲ್ಯೂಡಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ರೋಡ್ ಶೋ ನಡೆಸಿದರು.
ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಪರಿಷತ್ನ ಮಾಜಿ ಸದಸ್ಯ ಅಶ್ವಥ್ನಾರಾಯಣ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.ಈ ಇಬ್ಬರು ಅಭ್ಯರ್ಥಿಗಳು ರಾಮನಗರ ಜಿಲ್ಲಾಧಿಕಾರಿಗಳಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಡಾ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಕೃಷ್ಣಭೆರೇಗೌಡ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬೆಂಗಳುರು ನಗರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಬಿ.ಎಂ.ವಿಜಯಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಪರಮೇಶ್ವರ್, ಸಚಿವ ಜಮೀರ್ ಅಹಮ್ಮದ್ ಖಾನ್, ಶಾಸಕ ಗೋಪಾಲಯ್ಯ ಮತ್ತಿತರರು ಇದ್ದರು.
ಬಿಜೆಪಿ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಅದೇ ರೀತಿ ಕಾಂಗ್ರೆಸ್ಗೆ ಜೆಡಿಎಸ್ ಬಿಟ್ಟುಕೊಟ್ಟ ಕ್ಷೇತ್ರವಾದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣಭೆರೇಗೌಡ ಅವರನ್ನು ನಿನ್ನೆ ರಾತ್ರಿ ಆಯ್ಕೆ ಮಾಡಿತ್ತು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಅವರು ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ನಾಮಪತ್ರ ಸಲ್ಲಿಸಿದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್.ಬಸವರಾಜು ತಮ್ಮ ಉಮೇದುವಾರಿಕೆಯನ್ನು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಡಾ.ಕೆ.ರಾಕೇಶ್ಕುಮಾರ್ ಅವರಿಗೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಬಸವರಾಜು ಅವರು ತುಮಕೂರು ನಗರದಲ್ಲಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ, ಸೊಗಡು ಶಿವಣ್ಣ , ಮಾಜಿ ಶಾಸಕ ಸುರೇಶ್ಗೌಡ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಹಾಜರಿದ್ದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಚುನಾವಣಾಧಿಕಾರಿಯಾದ ವಿನೋತ್ಪ್ರಿಯ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಪಕ್ಷದ ಮುಖಂಡರು ಇದ್ದರು.
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಪ್ರಮುಖ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೋರಾಗಿತ್ತು.ಕೆಲವು ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಇಷ್ಟ ದೇವರುಗಳಿಗೆ ಪೂಜೆ ಸಲ್ಲಿಸಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ನಿನ್ನೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸಂಸದರಾದ ಮುದ್ದಹನುಮೇಗೌಡ, ಕೆ.ಎಚ್.ಮುನಿಯಪ್ಪ , ವೀರಪ್ಪ ಮೊಯ್ಲಿ, ನಳೀನ್ಕುಮಾರ್ ಕಟೀಲ್, ಮಾಜಿ ಸಚಿವರಾದ ಎ.ಮಂಜು, ಬಿ.ಎನ್.ಬಚ್ಚೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ಮತ್ತು ನಟ ನಿಖಿಲ್ಕುಮಾರ ಸ್ವಾಮಿ ಸೇರಿದಂತೆ ಪ್ರಮುಖರು ನಾಮಪತ್ರ ಸಲ್ಲಿಸಿದ್ದರು.
ಏ.18ರಂದು ಮತದಾನ ನಡೆಯುವ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ,ಚಾಮರಾಜನಗರ, ಮೈಸೂರು-ಕೊಡಗು, ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರು, ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ.
ಮೊದಲ ಹಂತದ 14 ಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ವಾಪಸ್ ಪಡೆಯಲು ಮಾ.29ರವರೆಗೂ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.ಮೇ 23ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.