ಬೆಂಗಳೂರು, ಏ.11- ರಾಜ್ಯದ ಮೊದಲ ಹಂತದ ಮತದಾನಕ್ಕೆ ಕೇವಲ ಒಂದು ವಾರ ಬಾಕಿ ಉಳಿದಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಬಿರು ಬಿಸಿಲನ್ನೂ ಲೆಕ್ಕಿಸದೆ ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.
ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಮತಯಾಚನೆ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಬಿಜೆಪಿ ಅಭ್ಯರ್ಥಿ, ಸಂಸದೆ ಶೋಭಾ ಕರಂದ್ಲಾಜೆ ಅವರ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಇಂದು ಮದ್ದೂರು-ಮಳವಳ್ಳಿಯಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.
ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಹಾಸನ ಲೋಕಸಭಾ ಕ್ಷೇತ್ರವ್ಯಾಪ್ತಿಯ ಹಾಸನ ಮತ್ತು ಅರಸೀಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಪರವಾಗಿ ಮತಯಾಚನೆ ಮಾಡಿದರು.
ಇದೇ ರೀತಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ರೋಡ್ ಶೋ, ಬಹಿರಂಗ ಪ್ರಚಾರದ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.ಅಲ್ಲದೆ ಚುನಾವಣಾ ಕಣದಲ್ಲಿರುವ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕೂಡ ತಮ್ಮ ತಮ್ಮ ಬೆಂಬಲಿಗರು, ಹಿತೈಷಿಗಳೊಂದಿಗೆ ಆಯಾ ಕ್ಷೇತ್ರವ್ಯಾಪ್ತಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡು ಮತದಾರರನ್ನು ಒಲಿಸುವ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.