ಬೆಂಗಳೂರು, ಏ.16- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದ್ದು, ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದ ಅಬ್ಬರದ ಚುನಾವಣಾ ಪ್ರಚಾರ ಸಂಜೆ ಮುಗಿಯಲಿದ್ದು, ಸಂಜೆಯಿಂದ ಮನೆ ಮನೆ ಪ್ರಚಾರ ಮಾತ್ರ ಮಾಡಲಾಗುತ್ತದೆ.
ಚುನಾವಣಾ ಕಣದಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಆಯಾ ಪಕ್ಷಗಳ ನಾಯಕರು, ಮುಖಂಡರು, ಪಕ್ಷೇತರ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ನಿರಂತರವಾಗಿ ನಡೆಸುತ್ತಿದ್ದ ರೋಡ್ ಶೋ, ಬಹಿರಂಗ ಸಮಾವೇಶಗಳಿಗೂ ಇಂದು ಸಂಜೆ ವೇಳೆಗೆ ತೆರೆ ಬೀಳಲಿದೆ.
ಹೀಗಾಗಿ ಚುನಾವಣಾ ಪ್ರಚಾರದಲ್ಲಿರುವ ರಾಷ್ಟ್ರೀಯ, ರಾಜ್ಯ ನಾಯಕರು, ಕೇಂದ್ರ ಮತ್ತು ರಾಜ್ಯ ಸಚಿವರು ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನೇತಾರರು ಸುಡು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಚುನಾವಣಾ ಪ್ರಚಾರ ಕೈಗೊಂಡರು.ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಕೊನೆ ಗಳಿಗೆಯ ಪ್ರಚಾರದ ಅಬ್ಬರ ಎಲ್ಲೆಡೆ ಜೋರಾಗಿತ್ತು.ತೆರೆದ ವಾಹನಗಳಲ್ಲಿ ನಾಯಕರು ಹಾಗೂ ಅಭ್ಯರ್ಥಿಗಳು ರೋಡ್ ಶೋವನ್ನು ಕೆಲವೆಡೆ ನಡೆಸಿದರಲ್ಲದೆ, ಕೆಲವು ಕ್ಷೇತ್ರಗಳಲ್ಲಿ ಬಹಿರಂಗ ಸಮಾವೇಶ ನಡೆಸುವ ಮೂಲಕ ಮತಯಾಚನೆ ಮಾಡಿದರು.
ಮತದಾರರನ್ನು ಓಲೈಸಲು ಕೊನೆ ಕ್ಷಣದ ಕಸರತ್ತು ಹೆಚ್ಚಾಗಿ ಕಂಡುಬಂದಿತು.ಕರಪತ್ರ, ಬಾವುಟ ಹಿಡಿದು ಕಾರ್ಯಕರ್ತರು ಮತಯಾಚನೆ ಮಾಡುತ್ತಿದ್ದ ದೃಶ್ಯಗಳು ಕಂಡುಬಂದವು.
ಸಂಜೆಯಾಗುತ್ತಿದ್ದಂತೆ ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಬೇಕಾಗಿರುವುದರಿಂದ ಚುನಾವಣಾ ಪ್ರಚಾರದಲ್ಲಿರುವ ನಾಯಕರು ವಾಪಸಾಗಲಿದ್ದಾರೆ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮಾ.19ರಂದು ಅಧಿಸೂಚನೆ ಹೊರಡಿಸಲಾಗಿತ್ತು.
ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡು ಚುನಾವಣಾ ಪ್ರಚಾರ ರಂಗೇರತೊಡಗಿತ್ತು.
ತುಮಕೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಬ್ಬಿ, ಕೊರಟಗೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ಮಾಡಿದರೆ, ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯ್ಶಂಕರ್ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತಯಾಚನೆ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದಲ್ಲಿ , ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಧಾರವಾಡ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು. ವಿವಿಧ ರಾಜಕೀಯ ಪಕ್ಷಗಳ ರಾಜ್ಯಾಧ್ಯಕ್ಷರು, ಆಯಾ ಪಕ್ಷಗಳ ಮುಖಂಡರು ಚುನಾವಣಾ ಅಖಾಡಕ್ಕಿಳಿದು ಕಡೆ ದಿನದ ಪ್ರಚಾರದಲ್ಲಿ ತೊಡಗಿದ್ದರು.
ಮೊದಲ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ 10, ಬಿಜೆಪಿ 13, ಜೆಡಿಎಸ್ 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ ಚುನಾವಣಾ ಕಣದಲ್ಲಿ 241 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.30,164 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎರಡನೆ ಹಂತದ ಉಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಏ.21ರ ವರೆಗೂ ಬಹಿರಂಗ ಪ್ರಚಾರಕ್ಕೆ ಅವಕಾಶವಿದೆ. ರಾಜಕೀಯ ಪಕ್ಷಗಳ ನಾಯಕರು ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ದಕ್ಷಿಣ ಕರ್ನಾಟಕದಿಂದ ಉತ್ತರ ಕರ್ನಾಟಕದತ್ತ ಮುಖ ಮಾಡಲಿದ್ದು, ಎರಡನೆ ಹಂತದ ಪ್ರಚಾರಕ್ಕೆ ಆದ್ಯತೆ ನೀಡಲಿದ್ದಾರೆ.
ರಾಜಕೀಯ ಪಕ್ಷಗಳ ನಾಯಕರಲ್ಲದೆ ಆಯಾ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರ ಅಭ್ಯರ್ಥಿಗಳು ಇಂದು ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.
ಒಟ್ಟಾರೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಎಲ್ಲೆಡೆ ಅಬ್ಬರದ ಪ್ರಚಾರ ನಡೆಯುತ್ತಿದೆ.ಮತದಾರರನ್ನು ಒಲಿಸುವ ಕಡೆ ಗಳಿಗೆಯ ಪ್ರಯತ್ನ ಕೂಡ ಮಾಡಲಾಗುತ್ತಿದೆ.