ಬೆಂಗಳೂರು, ಏ.25- ಉಮೇಶ್ ಜಾಧವ್ ಅವರ ರಾಜೀನಾಮೆ ಹಾಗೂ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಇಂದು ಕೆಪಿಸಿಸಿಯಲ್ಲಿ ಮಹತ್ವದ ಸಭೆ ನಡೆಯಿತು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಶಾಸಕರಾದ ಪಿ.ಟಿ.ಪರಮೇಶ್ವರ್ ನಾಯಕ್, ಅಜಯ್‍ಸಿಂಗ್ ಸೇರಿದಂತೆ ಹಲವಾರು ಮಂದಿ ಪ್ರಮುಖರು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು.
ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 16 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಆರಂಭದಲ್ಲಿ ಇತ್ತೀಚೆಗೆ ಬಿಜೆಪಿಯಿಂದ ಕಾಂಗ್ರೆಸ್‍ಗೆ ಸೇರಿದ ವಿಧಾನಪರಿಷತ್‍ನ ಮಾಜಿ ಸದಸ್ಯ ಕೆ.ಬಿ.ಶಾಣಪ್ಪ ಅವರನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎಂದು ಹೇಳಲಾಗಿತ್ತು. ಆದರೆ, ಚಿಂಚೋಳಿಯಲ್ಲಿ ಲಂಬಾಣಿ ಮತಗಳು ಅತಿ ಹೆಚ್ಚು ಇದ್ದು, ಅದೇ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂಬ ಚರ್ಚೆಗಳು ನಡೆದಿವೆ.
ಹೀಗಾಗಿ ಮಾಜಿ ಸಚಿವ ಬಾಬುರಾವ್ ಚೌವ್ಹಾಣ್, ಜಿಪಂ ಮಾಜಿ ಅಧ್ಯಕ್ಷ ಸುಭಾಷ್ ರಾಥೋಡ್ ಅವರ ಹೆಸರುಗಳು ಕೇಳಿ ಬರುತ್ತಿವೆ.
ಮಾಜಿ ಸಚಿವ ರೇವುನಾಯಕ್ ಬೆಳಮಗಿ ಅವರು ಬಿಜೆಪಿಯಿಂದ ಜೆಡಿಎಸ್‍ಗೆ ವಲಸೆ ಹೋಗಿದ್ದಾರೆ. ಬಹಳ ದಿನಗಳಿಂದಲೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ರಾಜಕೀಯ ಹಗೆತನ ಸಾಧಿಸಿದ ಬೆಳಮಗಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದಾಗಿ ವೈರತ್ವ ಮರೆತು ಖರ್ಗೆ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
ಹೀಗಾಗಿ ರೇವುನಾಯಕ್ ಬೆಳಮಗಿ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡುವ ಕುರಿತು ಚರ್ಚೆಗಳು ನಡೆದಿವೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಶಾಸಕರಾದ ಸುನೀಲ್‍ವಲ್ಯಾಪುರೆ ಅವರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಧಾರವಾಡ ಜಿಲ್ಲೆ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಸಿ.ಎಸ್.ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರನ್ನು ಕಣಕ್ಕಿಳಿಸಲು ತಯಾರಿಗಳು ನಡೆದಿವೆ.
ಕುಂದಗೋಳಕ್ಕಿಂತ ಚಿಂಚೋಳಿ ಕ್ಷೇತ್ರದ ಬಗ್ಗೆ ಇಂದಿನ ಸಭೆಯಲ್ಲಿ ಗಂಭೀರ ಚರ್ಚೆಗಳು ನಡೆದಿವೆ. ಕಾಂಗ್ರೆಸ್‍ಗೆ ಕೈ ಕೊಟ್ಟು ಬಿಜೆಪಿ ಸೇರಿದ ಉಮೇಶ್ ಜಾಧವ್ ಅವರನ್ನು ಮಣಿಸಲು ಕೈ ನಾಯಕರು ತಾಲೀಮು ಆರಂಭಿಸಿದ್ದಾರೆ.