ಬೆಂಗಳೂರು: ಯಾವುದೇ ಕಾರಣಕ್ಕೂ ಹಾಸನ, ಮಂಡ್ಯ ಮತ್ತು ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದಿಲ್ಲ. ಈ ಮೂರೂ ಕ್ಷೇತ್ರಗಳಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ತುಮಕೂರಿನಲ್ಲಿ ಎಚ್.ಡಿ.ದೇವೇಗೌಡರಿಗೆ ಸೋಲು ಕಟ್ಟಿಟ್ಟ ಬುತ್ತಿ. ಜನತೆ ಈ ಮೂವರನ್ನೂ ಸಾರಾಸಗಟಾಗಿ ತಿರಸ್ಕರಿಸಲಿದ್ದಾರೆ ಎಂದು ಹೇಳಿದರು.
ಏನೇ ತಂತ್ರ-ಕುತಂತ್ರ ಮಾಡಿದರೂ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವೇ ಇಲ್ಲ. ಇದರ ಸುಳಿವರಿತೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೆಸಾರ್ಟ್‍ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
23ರ ಫಲಿತಾಂಶದ ನಂತರ ಸರ್ಕಾರವನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ತಮ್ಮ ಆಪ್ತರ ಜತೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಯಾವ ಕಾರಣಕ್ಕೂ ಫಲಿತಾಂಶದ ಬಳಿಕ ಸರ್ಕಾರ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಗೆಲ್ಲುವುದರಲ್ಲಿ ಯಾವ ಸಂಶಯವೂ ಬೇಡ. ಅಲ್ಲಿ ಹಣಬಲ ಮತ್ತು ಅಧಿಕಾರ ದುರುಪಯೋಗಪಡಿಸಿಕೊಂಡು ಜೆಡಿಎಸ್ ಗೆಲ್ಲಲು ಮುಂದಾಗಿತ್ತು. ಆದರೆ, ಮಂಡ್ಯದ ಸ್ವಾಭಿಮಾನ ಜನ ಸುಮಲತಾ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಹೇಳಿದರು.
ಕೊಡಗು, ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆಂಬ ಸಚಿವ ಜಿ.ಟಿ.ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪನವರು ಅವರು ಸತ್ಯವನ್ನೇ ಹೇಳಿದ್ದಾರೆ. ಸತ್ಯವನ್ನಲ್ಲದೆ ಬೇರೇನೂ ಹೇಳಿಲ್ಲ.
ಮೈಸೂರಿನಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪ್ರತಾಪ್‍ಸಿಂಹ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದರೆ.ಜಿ.ಟಿ.ದೇವೇಗೌಡರು ಕೇವಲ ಮೈಸೂರನ್ನು ಗಮನದಲ್ಲಿಟ್ಟುಕೊಂಡು ಈ ಮಾತು ಹೇಳಿಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಇದೇ ರೀತಿಯ ಮತದಾನವಾಗಿದೆ ಎಂದು ಬಿಎಸ್‍ವೈ ಮತ್ತೊಂದು ಬಾಂಬ್ ಸಿಡಿಸಿದರು.