ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ಪ್ರಮಾಣವಚನ

ಬೆಂಗಳೂರು, ಮೇ 6- ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನಕಾರ್ಯದರ್ಶಿ ಎನ್.ಸಿ.ಶ್ರೀನಿವಾಸ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಮಾಹಿತಿ ಆಯೋಗದ ಮಾಹಿತಿ ಆಯುಕ್ತರಾಗಿ ಎಸ್.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿವಾಲಾ ಅವರು ಆಯೋಗದ ಮುಖ್ಯ ಮಾಹಿತಿ ಆಯುಕ್ತರಿಗೆ ಅಧಿಕಾರದ ಪ್ರಮಾಣವಚನವನ್ನು ಬೋಧಿಸಿದರು.

ಈ ಮೂವರು ಗಣ್ಯರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಶ್ರೀನಿವಾಸ್ ಮತ್ತು ಸೋಮಶೇಖರ್ ಅವರು ಇಂಗ್ಲಿಷ್‍ನಲ್ಲಿ ಹಾಗೂ ಮಂಜುನಾಥ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನಕ್ಕೂ ಮುನ್ನ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಈ ಮೂವರು ಗಣ್ಯರ ನೇಮಕಾತಿ ಅಧಿಸೂಚನೆಯನ್ನು ವಾಚಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್‍ಶೆಟ್ಟಿ, ರಾಜ್ಯ ಹೈಕೋರ್ಟ್‍ನ ಅಂಗಾಮಿ ಮುಖ್ಯನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ರಾಜ್ಯಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಅಜುಂಪರ್ವೇಜ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀನಿವಾಸ್ ಅವರು 2009ರಲ್ಲಿ ನಡೆದ ಜಿಲ್ಲಾ ನ್ಯಾಯಾಧೀಶರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದು ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

ರಾಜ್ಯ ಹೈಕೋರ್ಟ್‍ನ ಧಾರವಾಡ ಪೀಠದ ಅಡಿಷನಲ್ ರಿಜಿಸ್ಟ್ರಾರ್ ಜನರಲ್ ಮತ್ತು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಸಿಂಡಿಕೇಟ್‍ನ ಪದನಿಮಿತ್ತ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ