ಬೆಂಗಳೂರು, ಮೇ 14- ರಾಜ್ಯದಲ್ಲಿ ಕೈಗೊಂಡಿರುವ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರು ಪೂರೈಕೆ ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆಯ ನೀತಿ-ಸಂಹಿತೆ ಜಾರಿಯಲ್ಲಿರುವ ಧಾರವಾಡ ಹಾಗೂ ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳ ಡಿಸಿ ಮತ್ತು ಸಿಇಒಗಳೊಂದಿಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕುಮಾರಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ.
ಆಯಾ ಜಿಲ್ಲೆಯಲ್ಲಿ ಕೈಗೊಂಡೆಇರುವ ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ, ಜಾನುವಾರುಗಳ ಸಂರಕ್ಷಣೆಗೆ ಮೇವುಬ್ಯಾಂಕ್ ಸ್ಥಾಪನೆ, ಗೋಶಾಲೆ ನಿರ್ಮಾಣ, ಜನರು ಗುಳೆ ಹೋಗದಂತೆ ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಡಿಸಿ ಮತ್ತು ಸಿಇಒಗಳಿಂದ ಮಾಹಿತಿ ಪಡೆಯಲಿದ್ದಾರೆ.
ಬೇಸಿಗೆಯಲ್ಲಿ ಕುಡಿಯುವ ನೀರು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಸ್ಪಷ್ಟ ನಿರ್ದೇಶನ ನೀಡಲಿದ್ದಾರೆ.
ಮುಖ್ಯಮಂತ್ರಿ ನಡೆಸುವ ವಿಡಿಯೋ ಸಂವಾದದ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದು, ಮುಂಬರುವ ಮಳೆಗಾಲದ ಬಗ್ಗೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಇತ್ತೀಚೆಗೆ ನಡೆದ ಸಚಿವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಯ ಬರಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆಗಳನ್ನು ನಡೆಸಲು ಸೂಚನೆ ನೀಡಲಾಗಿದೆ.
ಮುಂಗಾರಿಗೂ ಮುನ್ನ ಕೆಲವೆಡೆ ಬೇಸಿಗೆ ಮಳೆಯಿಂದ ಉಂಟಾಗಿರುವ ಮಳೆ, ವಿದ್ಯುತ್ ಕಂಬ ಸೇರಿದಂತೆ ಉಂಟಾಗಿರುವ ಆಸ್ತಿ-ಪಾಸ್ತಿ ಹಾನಿ ಬಗ್ಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದು ಸೂಕ್ತ ಸೂಚನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.