ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ-ಯಡಿಯೂರಪ್ಪ

ತಾಂಡೂರು, ಮೇ 15-ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಳಜಗಳದಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋದರೆ ಸಹಜವಾಗಿ ಆ ಸಂದರ್ಭದಲ್ಲಿ ನಾವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತೆಲಂಗಾಣ ರಾಜ್ಯದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ಲಿಂಗಾಯತರ ನಾಯಕರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆ ಫಲಿತಾಂಶದ ಬಳಿಕ ರಾಜಕೀಯವಾಗಿ ಸಾಕಷ್ಟು ಬದಲಾವಣೆಗಳಾಗುತ್ತವೆ. 22ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಎರಡೂ ಕ್ಷೇತ್ರದ ಉಪಚುನಾವಣೆಯನ್ನು ನಾವು ಗೆಲ್ಲುತ್ತೇವೆ. ಕೇಂದ್ರದಲ್ಲಿ ಮೋದಿಯವರು 280 ರಿಂದ 285 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಕಾಂಗ್ರೆಸ್‍ನಲ್ಲಿ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತದ ಬಗ್ಗೆ ಬೇಸರ ಹೊಂದಿದ್ದಾರೆ. ಫಲಿತಾಂಶದ ಬಳಿಕ ಸರ್ಕಾರದ ಮೇಲೆ ಪರಿಣಾಮ ಬೀರಲಿದೆ. ನಾವು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದೂ ಇಲ್ಲ, ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿಯೂ ಇಲ್ಲ. ವಿರೋಧ ಪಕ್ಷದ ಜವಾಬ್ದಾರಿ ನಮ್ಮ ಮೇಲಿದೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ಒಳಜಗಳದಿಂದ ಸಮ್ಮಿಶ್ರ ಸರ್ಕಾರ ಪತನಗೊಂಡರೆ ಆ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಅವಿನಾಶ್ ಜಾಧವ್ ಅವರನ್ನು ಲಿಂಗಾಯತ ಸಮುದಾಯ ಬೆಂಬಲಿಸಬೇಕು. ಅವಿನಾಶ್ ಜಾಧವ್ ಗೆದ್ದರೆ ಲಿಂಗಾಯತ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಸಿದ್ದರಾಮಯ್ಯ, ಮಲ್ಲಿಕಾರ್ಜುನ್‍ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಚುನಾವಣಾ ಪ್ರಚಾರದ ಕಣದಲ್ಲಿ ನೀಡುತ್ತಿರುವ ಹೇಳಿಕೆಗಳಿಗೆ ಬೆಲೆಯಿಲ್ಲ ಎಂದು ಅವರು ತಿರುಗೇಟು ನೀಡಿದರು.

ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್‍ನ ಅತೃಪ್ತ ಶಾಸಕರ್ಯಾರೂ ನನ್ನ ಸಂಪರ್ಕದಲ್ಲಿಲ್ಲ. ನಮ್ಮ ನಾಯಕರ ಸಂಪರ್ಕದಲ್ಲಿರುವ ಮಾಹಿತಿ ನನಗಿಲ್ಲ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ