ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ನರೇಂದ್ರ ಮೋದಿ ಇಂದು ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ನರೇಂದ್ರ ಮೋದಿ ಅವರಿಗೆ ಸಾಥ್ ನೀಡಿದರು.
ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದರು. ಈ ಸಂದರ್ಭದಲ್ಲಿ ವಾರಾಣಸಿಯ ಪ್ರತಿಯೊಬ್ಬ ಮತದಾರರು ನರೇಂದ್ರ ಮೋದಿ ಇದ್ದಂತೆ. ನೀವೇ ಪ್ರಚಾರ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು. ಹಾಗೂ ತಮ್ಮನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ್ದ ವಾರಾಣಸಿಯ ಮತದಾರರು ನರೇಂದ್ರ ಮೋದಿ ಅವರನ್ನು ಅಂದಾಜು 5 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ, ಲೋಕಸಭೆಗೆ ಕಳುಹಿಸಿದ್ದಾರೆ. ಇದಕ್ಕಾಗಿ ತಮ್ಮ ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಲು ಪ್ರಧಾನಿ ಮೋದಿ ವಾರಾಣಸಿಗೆ ಆಗಮಿಸಿದ್ದಾರೆ.
ಇದೇ ವೇಳೆ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿದ ಮೋದಿ ಅಲ್ಲಿ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದರು. ಮೇ.30 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. 2014 ರಲ್ಲಿಯೂ ಸಹ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಾಶಿ ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದರು.
PM Narendra Modi offers prayers at the Kashi vishwanatha