ಬೆಂಗಳೂರು, ಜೂ.14-ಸರ್ಕಾರ ಸುಭದ್ರ ಮಾಡಿಕೊಳ್ಳಲು ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿರುವ ಬೆನ್ನಲ್ಲೇ ಚಾಮರಾಜನಗರ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಭೇಟಿ ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಆಗಮಿಸಿದ ವಿಶ್ವನಾಥ್ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ.
ಉಭಯ ನಾಯಕರ ಮಾತುಕತೆ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಸಂತೋಷ್ ಕೂಡ ಹಾಜರಿದ್ದುದು ನಾನಾ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಇತ್ತೀಚೆಗಷ್ಟೇ ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೇ ವೇಳೆ ಅವರು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ನಡವಳಿಕೆ ವಿರುದ್ಧ ಕೆಂಡಕಾರಿದ್ದರು.
ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ವಿಶ್ವನಾಥ್ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಒಂದು ಗುಂಪು ಒತ್ತಡ ಹಾಕುತ್ತಿರುವಾಗಲೇ ಶ್ರೀನಿವಾಸ್ಪ್ರಸಾದ್ ಅವರನ್ನು ಭೇಟಿಯಾಗಿರುವುದು ಯಾವ ಕಾರಣಕ್ಕಾಗಿ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ಹಿಂದೆಯೂ ಮೈಸೂರಿನಲ್ಲಿ ಇದ್ದಕ್ಕಿದ್ದಂತೆ ದಿಢೀರನೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿದ್ದರು.ನಾವಿಬ್ಬರು ನಾಲ್ಕು ದಶಕಗಳ ಸ್ನೇಹಿತರು. ಆಗಾಗ್ಗೆ ನಾವು ಭೇಟಿಯಾಗುತ್ತಲೇ ಇರುತ್ತೇವೆ. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.
ಪುನಃ ನಿನ್ನೆ ರಾತ್ರಿ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ರಾಜಕೀಯ ಧೃವೀಕರಣಕ್ಕೆ ಮುನ್ನುಡಿ ಬರೆಯಲಿದೆಯೇ ಎಂಬ ಮಾತುಗಳು ಹಬ್ಬಿವೆ.